
ಕುಲದೀಪ್ ಸಿಂಗ್ ಸೆಂಗರ್
ನವದೆಹಲಿ: 'ಆತನನ್ನು ಗಲ್ಲಿಗೇರಿಸುವವರೆಗೂ ವಿಶ್ರಮಿಸುವುದಿಲ್ಲ' ಎಂದು ಉನ್ನಾವೊ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ.
ಅದೇ ವೇಳೆ ದೆಹಲಿ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ ಸುಪ್ರೀಂ ಕೋರ್ಟ್ ನಿರ್ಧಾರವನ್ನು ಸಂತ್ರಸ್ತೆ ಸ್ವಾಗತಿಸಿದ್ದಾರೆ.
2017ರ ಉನ್ನಾವೊ ಅತ್ಯಾಚಾರ ಪ್ರಕರಣದ ಆರೋಪಿ, ಬಿಜೆಪಿ ಉಚ್ಚಾಟಿತ ನಾಯಕ ಕುಲದೀಪ್ ಸಿಂಗ್ ಸೆಂಗರ್‌ಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ, ಜಾಮೀನು ನೀಡಿ ದೆಹಲಿ ಹೈಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು (ಸೋಮವಾರ) ತಡೆ ನೀಡಿತ್ತು. ಈ ಕುರಿತು ನಾಲ್ಕು ವಾರಗಳ ಒಳಗಾಗಿ ಪ್ರತಿಕ್ರಿಯೆ ಸಲ್ಲಿಸುವಂತೆ ಸೆಂಗರ್‌ಗೆ ನೋಟಿಸ್ ಜಾರಿ ಮಾಡಿದೆ.
'ಈ ಆದೇಶದಿಂದ ಸಂತೋಷವಾಗಿದೆ. ಸುಪ್ರೀಂ ಕೋರ್ಟ್‌ನಿಂದ ನನಗೆ ನ್ಯಾಯ ದೊರಕಿದೆ. ನಾನು ಮೊದಲಿನಿಂದಲೂ ನ್ಯಾಯಕ್ಕಾಗಿ ಹೋರಾಡುತ್ತಿದ್ದೇನೆ' ಎಂದು ಸಂತ್ರಸ್ತೆ ಹೇಳಿದ್ದಾರೆ.
'ನ್ಯಾಯಾಲಯದ ವಿರುದ್ಧ ಯಾವುದೇ ಆರೋಪಗಳನ್ನು ಹೊರಿಸುವುದಿಲ್ಲ. ನನಗೆ ನ್ಯಾಯಾಲಯದ ಮೇಲೆ ಅತೀವ ನಂಬಿಕೆ ಇದೆ. ನನಗೀಗ ಸುಪ್ರೀಂ ಕೋರ್ಟ್‌ನಿಂದ ನ್ಯಾಯ ದೊರಕಿದೆ' ಎಂದು ಪ್ರತಿಕ್ರಿಯಿಸಿದ್ದಾರೆ.
'ಅವನನ್ನು ಗಲ್ಲಿಗೇರಿಸುವವರೆಗೂ ಸುಮ್ಮನಿರುವುದಿಲ್ಲ. ನನ್ನ ಹೋರಾಟ ಮುಂದುವರಿಯಲಿದೆ. ಆಗ ಮಾತ್ರ ನನಗೆ ಹಾಗೂ ನನ್ನ ಕುಟುಂಬಕ್ಕೆ ನ್ಯಾಯ ಸಿಗಲಿದೆ. ಈಗಲೂ ನಮಗೆ ಬೆದರಿಕೆಗಳು ಬರುತ್ತಿವೆ' ಎಂದು ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಸಂತ್ರಸ್ತೆಯ ಕುಟುಂಬ ಸದಸ್ಯರು ಸಮಾಧಾನ ವ್ಯಕ್ತಪಡಿಸಿದ್ದು, 'ಇದರಿಂದ ನ್ಯಾಯ ವ್ಯವಸ್ಥೆಯ ಮೇಲಿನ ನಂಬಿಕೆ ಪುನಃಸ್ಥಾಪಿಸಲಾಗಿದೆ' ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.