ADVERTISEMENT

ಪ್ರವಾದಿ ಅವಹೇಳನ ವಿರೋಧಿಸಿ ಹಿಂಸಾಚಾರ: 227 ಜನರನ್ನು ಬಂಧಿಸಿದ ಯುಪಿ ಪೊಲೀಸರು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಜೂನ್ 2022, 11:16 IST
Last Updated 11 ಜೂನ್ 2022, 11:16 IST
ಪ್ರಯಾಗ್‌ರಾಜ್‌ನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆ
ಪ್ರಯಾಗ್‌ರಾಜ್‌ನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆ   

ಲಖನೌ: ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಉತ್ತರ ಪ್ರದೇಶದ ಹಲವು ನಗರಗಳಲ್ಲಿ ಶುಕ್ರವಾರ ಪ್ರತಿಭಟನೆಗಳು ನಡೆದಿವೆ. ಈ ವೇಳೆ ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ, ಸಾರ್ವಜನಿಕ ಆಸ್ತಿಗೆ ಹಾನಿ ಉಂಟು ಮಾಡಿದ್ದಾರೆ.

ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗವಹಿಸಿದ ಆರೋಪದ ಮೇಲೆ ಉತ್ತರ ಪ್ರದೇಶದಲ್ಲಿ ಈ ವರೆಗೆ 227 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

‘68 ಮಂದಿಯನ್ನು ಪ್ರಯಾಗ್‌ರಾಜ್‌ನಲ್ಲಿ ಮತ್ತು 50 ಮಂದಿಯನ್ನು ಹತ್ರಾಸ್‌ನಲ್ಲಿ ಬಂಧಿಸಲಾಗಿದೆ’ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಶನಿವಾರ ತಿಳಿಸಿದ್ದಾರೆ.

ADVERTISEMENT

ಸಹರಾನ್‌ಪುರದಲ್ಲಿ 48, ಅಂಬೇಡ್ಕರ್‌ನಗರದಲ್ಲಿ 28, ಮೊರಾದಾಬಾದ್‌ನಲ್ಲಿ 25 ಮತ್ತು ಫಿರೋಜಾಬಾದ್‌ನಲ್ಲಿ 8 ಜನರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.

ರಾಜ್ಯದ ಶಾಂತಿ ಹಾಳು ಮಾಡಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ.

ಕಳೆದ ಮೇ 27ರಂದು ಖಾಸಗಿ ಸುದ್ದಿ ವಾಹಿನಿಯಲ್ಲಿ ಜ್ಞಾನವಾಪಿ ಮಸೀದಿ ಕುರಿತಾದ ಚರ್ಚೆಯಲ್ಲಿ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಅವರು ಪ್ರವಾದಿ ಮಹಮ್ಮದರ ಕುರಿತು ಅವಹೇಳನಾಕಾರಿ ಮಾತುಗಳನ್ನು ಆಡಿದ್ದಾರೆ ಎಂದು ಆರೋಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.