ADVERTISEMENT

ಉ.ಪ್ರ ಚುನಾವಣೆ ಕಾಂಗ್ರೆಸ್‌ನಿಂದ ಮಹಿಳೆಯರಿಗೆ ಪ್ರತ್ಯೇಕ ಪ್ರಣಾಳಿಕೆ: ಪ್ರಿಯಾಂಕಾ

ಮಹಿಳೆಯರಿಗೆ ವರ್ಷಕ್ಕೆ ಮೂರು ಅಡುಗೆ ಸಿಲಿಂಡರ್ ಉಚಿತ, ಬಸ್‌ನಲ್ಲಿ ಉಚಿತ ಪ್ರಯಾಣದ ಭರವಸೆ

ಪಿಟಿಐ
Published 1 ನವೆಂಬರ್ 2021, 6:57 IST
Last Updated 1 ನವೆಂಬರ್ 2021, 6:57 IST
ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ   

ಲಖನೌ: ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮಹಿಳೆಯರಿಗಾಗಿ ಪ್ರತ್ಯೇಕ ಚುನಾವಣಾ ಪ್ರಣಾಳಿಕೆಯನ್ನು ಸಿದ್ಧಪಡಿಸಲಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಸೋಮವಾರ ತಿಳಿಸಿದ್ದಾರೆ.

‘ಪಕ್ಷ ಅಧಿಕಾರಕ್ಕೆ ಬಂದರೆ, ಮಹಿಳೆಯರಿಗೆ ವರ್ಷಕ್ಕೆ ಉಚಿತವಾಗಿ ಮೂರು ಎಲ್‌ಪಿಜಿ ಸಿಲಿಂಡರ್ ಮತ್ತು ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯವನ್ನು ಕಲ್ಪಿಸುವುದಾಗಿ‘ ಅವರು ಭರವಸೆ ನೀಡಿದ್ದಾರೆ.

‘ಉತ್ತರ ಪ್ರದೇಶದ ನನ್ನ ಪ್ರೀತಿಯ ಸಹೋದರಿಯರೇ, ಪ್ರತಿ ದಿನದ ನಿಮ್ಮ ಜೀವನ ಹೋರಾಟದಿಂದ ತುಂಬಿದೆ. ಇದನ್ನು ಅರ್ಥಮಾಡಿಕೊಂಡಿರುವ ನಮ್ಮ ಪಕ್ಷ, ಮುಂದಿನ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗಾಗಿಯೇ ಪ್ರತ್ಯೇಕ ಚುನಾವಣಾ ಪ್ರಣಾಳಿಕೆಯನ್ನು ಸಿದ್ಧಪಡಿಸುತ್ತಿದೆ‘ ಎಂದು ಪ್ರಿಯಾಂಕಾ ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ.

ADVERTISEMENT

‘ಕಾಂಗ್ರೆಸ್ ಪಕ್ಷದ ಸರ್ಕಾರ ರಚನೆಯಾದ ಮೇಲೆ, ಮಹಿಳೆಯರಿಗೆ ವಾರ್ಷಿಕವಾಗಿ ಮೂರು ಎಲ್‌ಪಿಜಿ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡಲಿದೆ. ಹಾಗೆಯೇ ಮಹಿಳೆಯರು ರಾಜ್ಯ ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯ ಕಲ್ಪಿಸಲಾಗುವುದು‘ ಎಂದು ಅವರು ಹೇಳಿದರು.

ಪ್ರಿಯಾಂಕಾ, ಈ ಹೇಳಿಕೆಯ ಟ್ವೀಟ್‌ ಜೊತೆಗೆ, ಉತ್ತರ ಪ್ರದೇಶದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ನೀಡುವ ಭರವಸೆಗಳ ಪಟ್ಟಿಯನ್ನು ಲಗತ್ತಿಸಿದ್ದಾರೆ. ಈ ಪಟ್ಟಿಯಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ₹10 ಸಾವಿರ ಗೌರವಧನ ನೀಡುವ ಅಂಶವಿದೆ. ಮೀಸಲಾತಿ ಪ್ರಕಾರ ಎಲ್ಲ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ 40ರಷ್ಟು ಹುದ್ದೆಗಳನ್ನು ಮೀಸಲಿಡುವುದು, ವಿಧವೆಯರಿಗೆ ಒಂದು ಸಾವಿರ ರೂಪಾಯಿ ಮಾಸಿಕ ಪಿಂಚಣಿ ನೀಡುವುದು ಸೇರಿದಂತೆ ಹಲವು ಆಶ್ವಾಸನೆಗಳು ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.