ನವದೆಹಲಿ: ಅಮೆರಿಕ, ಭಾರತ ಮತ್ತು ಪಾಕಿಸ್ತಾನವನ್ನು ಒಂದೇ ತಕ್ಕಡಿಯಲ್ಲಿರಿಸಿ ಅಳೆದಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹಠಮಾರಿತನವನ್ನು ಬದಿಗಿಟ್ಟು, ಸರ್ವಪಕ್ಷಗಳ ಸಭೆ ಮತ್ತು ಸಂಸತ್ತಿನ ವಿಶೇಷ ಅಧಿವೇಶನ ಕರೆಯಬೇಕು ಎಂದು ಆಗ್ರಹಿಸಿದೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ(ಸಂವಹನ) ಜೈರಾಮ್ ರಮೇಶ್, 'ಅಮೆರಿಕದ ಸೇನಾ ದಿನಾಚರಣೆ (ಜೂನ್ 14) ಹಿನ್ನೆಲೆ ವಾಷಿಂಗ್ಟನ್ ಡಿಸಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮಕ್ಕೆ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರನ್ನು ಆಹ್ವಾನಿಸಲಾಗಿದೆ ಎಂದು ವರದಿಯಾಗಿದೆ. ಈ ಸುದ್ದಿ ರಾಜತಾಂತ್ರಿಕ ಮತ್ತು ಕಾರ್ಯತಂತ್ರದ ದೃಷ್ಟಿಕೋನದಿಂದ ಭಾರತಕ್ಕೆ ದೊಡ್ಡ ಹಿನ್ನಡೆಯಾಗಿದೆ' ಎಂದು ಹೇಳಿದ್ದಾರೆ.
ಇತ್ತೀಚೆಗೆ, ಅಮೆರಿಕದ ಸೆಂಟ್ರಲ್ ಕಮಾಂಡ್ ಮುಖ್ಯಸ್ಥರು, 'ಭಯೋತ್ಪಾದನೆ ವಿರುದ್ಧದ ಅಮೆರಿಕದ ಜಾಗತಿಕ ಹೋರಾಟದಲ್ಲಿ ಪಾಕಿಸ್ತಾನ ಪ್ರಮುಖ ಪಾತ್ರವಹಿಸುತ್ತಿದೆ ಎಂದು ಹೇಳಿದ್ದಾರೆ. ಟ್ರಂಪ್ ಆಡಳಿತ ನಿರಂತರವಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದು, ಅಮೆರಿಕ ಎರಡೂ ರಾಷ್ಟ್ರಗಳನ್ನು ಮೆಚ್ಚಿಸುವ ಕಾರ್ಯದಲ್ಲಿ ನಿರತವಾಗಿದೆ' ಎಂದು ಅರ್ಥೈಸಬಹುದು.
ಮೋದಿ ಸರ್ಕಾರ 'ಆಪರೇಷನ್ ಸಿಂಧೂರ' ಇನ್ನೂ ನಡೆಯುತ್ತಿದೆ ಎಂದು ಹೇಳುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಪಾಕ್ ಸೇನಾ ಮುಖ್ಯಸ್ಥರು ಅಮೆರಿಕ ಸೇನಾ ದಿನದಂದು ಅತಿಥಿಯಾಗಿ ಭಾಗವಹಿಸುತ್ತಿರುವುದು ಕಳವಳದ ಸಂಗತಿ ಎಂದಿದ್ದಾರೆ.
‘ಆಪರೇಷನ್ ಸಿಂಧೂರ’ ಬಳಿಕ ಭಯೋತ್ಪಾದನೆ ಕುರಿತು ಭಾರತದ ನಿಲುವು ದೃಢಪಡಿಸಲು ಅಮೆರಿಕ ಸೇರಿದಂತೆ ವಿವಿಧ ದೇಶಗಳಿಗೆ ಪ್ರವಾಸ ತೆರಳಿದ್ದ ಸರ್ವಪಕ್ಷ ನಿಯೋಗಗಳ ಸದಸ್ಯರನ್ನು ಪ್ರಧಾನಿ ಸ್ವಾಗತಿಸುವ ವೇಳೆಯೇ ಅಮೆರಿಕದಿಂದ ಇಂತಹ ಹೇಳಿಕೆಗಳು ಹೊರಬರುತ್ತಿವೆ. ಇದು ಭಾರತದ ರಾಜತಾಂತ್ರಿಕ ನಿಲುವನ್ನು ಇನ್ನಷ್ಟು ಇಕ್ಕಟ್ಟಿಗೆ ಸಿಲುಕಿಸಲಿದೆ ಎಂದು ಅವರು ಪೋಸ್ಟ್‌ನಲ್ಲಿ ಬರೆದಿದ್ದಾರೆ .
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.