
ಡೊನಾಲ್ಡ್ ಟ್ರಂಪ್ ಮತ್ತು ನಿಕೊಲಸ್ ಮಡೂರೊ
ನವದೆಹಲಿ: ವೆನೆಜುವೆಲಾದಲ್ಲಿನ ಪರಿಸ್ಥಿತಿ ಬಗ್ಗೆ ಭಾರತ ಭಾನುವಾರ ತೀವ್ರ ಕಳವಳ ವ್ಯಕ್ತಪಡಿಸಿದೆ. ವೆನಿಜುವೆಲಾದ ಜನರ ಯೋಗಕ್ಷೇಮ ಮತ್ತು ಸುರಕ್ಷತೆಗೆ ಬೆಂಬಲ ನೀಡುವುದಾಗಿಯೂ ಪುನರುಚ್ಚರಿಸಿದೆ.
‘ವೆನೆಜುವೆಲಾದಲ್ಲಿನ ಇತ್ತೀಚಿನ ಬೆಳವಣಿಗೆಗಳು ತೀವ್ರ ಕಳವಳಕಾರಿ ವಿಷಯವಾಗಿದೆ. ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ’ ಎಂದು ಭಾರತ ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಪ್ರಕಟಣೆಯಲ್ಲಿ ತಿಳಿಸಿದೆ.
‘ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳಲು ಮಾತುಕತೆಯ ಮೂಲಕ ಶಾಂತಿಯುತವಾಗಿ ಸಮಸ್ಯೆಗಳನ್ನು ಪರಿಹರಿಸಲು ನಾವು ಸಂಬಂಧಪಟ್ಟ ಎಲ್ಲರಿಗೂ ಕರೆ ನೀಡುತ್ತೇವೆ’ ಎಂದೂ ಎಂಇಎ ಹೇಳಿದೆ.
‘ಕರಾಕಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭಾರತೀಯ ಸಮುದಾಯದವರೊಂದಿಗೆ ಸಂಪರ್ಕದಲ್ಲಿದೆ ಮತ್ತು ಅವರಿಗೆ ಸಾಧ್ಯವಿರುವ ಎಲ್ಲ ನೆರವನ್ನು ಒದಗಿಸಲಿದೆ’ ಎಂದೂ ಎಂಇಎ ಭರವಸೆ ನೀಡಿದೆ.
ನಿಕೊಲಸ್ ಮಡೂರೊ ಅವರು ಮಾದಕವಸ್ತು ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ನಿರಂತರವಾಗಿ ಆರೋಪಿಸಿದ ನಂತರ ಅಮೆರಿಕ, ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್ ಮೇಲೆ ಶುಕ್ರವಾರ ರಾತ್ರಿ ವಾಯು ದಾಳಿ ನಡೆಸಿತ್ತು. ಬಳಿಕ ಮಡೂರೊ ಮತ್ತು ಅವರ ಪತ್ನಿ ಸಿಲಿಯಾ ಪ್ಲೋರ್ಸ್ ಅವರನ್ನು ಸೆರೆ ಹಿಡಿದಿತ್ತು.
ಅಮೆರಿಕ ಸೇನಾಪಡೆಗಳು ಮಡುರೊ ಮತ್ತು ಸಿಲಿಯಾ ಪ್ಲೋರ್ಸ್ ಅವರನ್ನು ನ್ಯೂಯಾರ್ಕ್‌ಗೆ ಕರೆದೊಯ್ದಿವೆ. ಅಮೆರಿಕದ ಕ್ರಮದ ಬೆನ್ನಲ್ಲೇ ವೆನಿಜುವೆಲಾದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.