ಭಾರತ ಜೋಡೊ ನ್ಯಾಯ ಯಾತ್ರೆಯ ವೇಳೆ ಕಪ್ಪು ಬಾವುಟ ಪ್ರದರ್ಶಿಸುತ್ತಿರುವ ದೃಶ್ಯ
ಲಖನೌ: ಉತ್ತರಪ್ರದೇಶದ ರಾಯ್‌ಬರೇಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಜೋಡೊ ನ್ಯಾಯ ಯಾತ್ರೆ ಸಾಗುತ್ತಿದ್ದ ವೇಳೆ ಕಿಡಿಗೇಡಿಗಳು ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ.
ಯಾತ್ರೆ ಸಾಗುತ್ತಿದ್ದ ದಾರಿಯಲ್ಲಿ ಕಟ್ಟಡವೊಂದರ ಮೇಲೆ ನಿಂತಿದ್ದ ಇಬ್ಬರು ವ್ಯಕ್ತಿಗಳು ಕಪ್ಪು ಬಾವುಟ ಪ್ರದರ್ಶಿಸುತ್ತಿರುವ ವಿಡಿಯೊವನ್ನು ಸುದ್ದಿಸಂಸ್ಥೆ ‘ಎಎನ್ಐ’ ಎಕ್ಸ್‌ನಲ್ಲಿ ಹಂಚಿಕೊಂಡಿದೆ.
ಭಾರತ ಜೋಡೊ ನ್ಯಾಯ ಯಾತ್ರೆಯು ಇಂದು (ಮಂಗಳವಾರ) 38ನೇ ದಿನಕ್ಕೆ ಕಾಲಿಟ್ಟಿದೆ. ಯಾತ್ರೆಯು ಅಮೇಥಿ ಜಿಲ್ಲೆಯ ಫರ್ಸಂತ್‌ಗಂಜ್‌ನಿಂದ ಪ್ರಾರಂಭವಾಗಿದ್ದು, ರಾಯ್‌ಬರೇಲಿ ಮೂಲಕ ಲಖನೌದತ್ತ ಸಾಗುತ್ತಿದೆ. ಇದೇ ವೇಳೆ ಪಕ್ಷದ ಕಾರ್ಯಕರ್ತರು ರಾಹುಲ್ ಗಾಂಧಿ ಅವರನ್ನು ಅದ್ದೂರಿಯಾಗಿ ಬರಮಾಡಿಕೊಂಡಿದ್ದಾರೆ.
ಇಂದು ರಾತ್ರಿ ಲಖನೌಗೆ ತಲುಪಲಿರುವ ಯಾತ್ರೆಯು ನಾಳೆ (ಬುಧವಾರ) ಕಾನ್ಪುರಕ್ಕೆ ಪ್ರವೇಶಿಸಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.
ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ರಾಹುಲ್‌ಗೆ ಜಾಮೀನು
2018ರ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಉತ್ತರ ಪ್ರದೇಶದ ಸುಲ್ತಾನಪುರ ನ್ಯಾಯಾಲಯ ಇಂದು ಜಾಮೀನು ಮಂಜೂರು ಮಾಡಿದೆ.
2018 ಮೇ 8ರಂದು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ವಿರುದ್ದ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು ಎಂದು ಆರೋಪಿಸಿ ವಿಜಯ್ ಮಿಶ್ರಾ ಎಂಬುವವರು ಆಗಸ್ಟ್ 4, 2018ರಂದು ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
‘ಬಿಜೆಪಿಯು ತಮ್ಮದು ಪ್ರಾಮಾಣಿಕ ಮತ್ತು ಸ್ವಚ್ಛ ರಾಜಕಾರಣದಲ್ಲಿ ನಂಬಿಕೆಯಿಟ್ಟಿರುವ ಪಕ್ಷ ಎಂದು ಹೇಳಿಕೊಳ್ಳುತ್ತದೆ. ಆದರೆ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ವ್ಯಕ್ತಿಯನ್ನು (ಅಮಿತ್ ಶಾ) ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಕೂರಿಸಿದೆ’ ಎಂದು ರಾಹುಲ್ ಗಾಂಧಿ ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.