ADVERTISEMENT

ಲಖಿಂಪುರ ಪ್ರಕರಣದ ಆರೋಪಿಗೆ ಜಾಮೀನು: ನ್ಯಾಯ ಕೊಡಿಸಲು ಕೇಂದ್ರ ವಿಫಲ ಎಂದ ಅಖಿಲೇಶ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಫೆಬ್ರುವರಿ 2022, 14:34 IST
Last Updated 10 ಫೆಬ್ರುವರಿ 2022, 14:34 IST
ಅಖಿಲೇಶ್‌ ಯಾದವ್‌
ಅಖಿಲೇಶ್‌ ಯಾದವ್‌   

ಲಖನೌ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ, ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾಗೆ ಅಲಹಾಬಾದ್ ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.

ಈ ವಿಚಾರವಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಅವರು ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

‘ಲಖಿಂಪುರ ಖೇರಿ ಪ್ರಕರಣದ ಆರೋಪಿಗೆ ಜಾಮೀನು ಸಿಕ್ಕಿದೆ. ಬಿಜೆಪಿ ನೇತೃತ್ವದ ಸರ್ಕಾರವು ನ್ಯಾಯ ಕೊಡಿಸುವಲ್ಲಿ ವಿಫಲವಾಗಿದೆ’ ಎಂದು ಅಖಿಲೇಶ್‌ ಹರಿಹಾಯ್ದಿದ್ದಾರೆ.

ADVERTISEMENT

‘ಆರೋಪಿಗೆ ಕಠಿಣ ಶಿಕ್ಷೆಯನ್ನು ಕೊಡಿಸುವಲ್ಲಿ ಸರ್ಕಾರವು ಮುಂದಾಗಬೇಕಿತ್ತು. ಆದರೆ, ಅದು ವಿಫಲವಾಗಿದೆ. ಲಖಿಂಪುರ ಖೇರಿಯಲ್ಲಿ ನಡೆದ ಘಟನೆಗೆ ವಿಶ್ವವೇ ಸಾಕ್ಷಿಯಾಗಿದೆ. ರೈತರ ಸಾವಿಗೆ ಬಿಜೆಪಿಯೇ ಕಾರಣ ಎಂಬ ಸತ್ಯ ಎಲ್ಲರಿಗೂ ತಿಳಿದಿದೆ’ ಎಂದು ಅಖಿಲೇಶ್‌ ತಿಳಿಸಿದ್ದಾರೆ.

ಕಳೆದ ವರ್ಷ ಅಕ್ಟೋಬರ್‌ 3ರಂದು ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಆಶಿಶ್‌ ಮಿಶ್ರಾ ಹಾಗೂ ಅವರ ಬೆಂಗಾವಲು ಪಡೆಯ ವಾಹನಗಳು ಹರಿದಿದ್ದವು. ಬಳಿಕ ಹಿಂಸಾಚಾರ ನಡೆದಿತ್ತು. ಘಟನೆಯಲ್ಲಿ ನಾಲ್ವರು ರೈತರು ಸೇರಿದಂತೆ 8 ಮಂದಿ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.