ADVERTISEMENT

ಲಖಿಂಪುರ ಖೇರಿ ಹಿಂಸಾಚಾರ: ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾಗೆ ಜಾಮೀನು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಫೆಬ್ರುವರಿ 2022, 9:22 IST
Last Updated 10 ಫೆಬ್ರುವರಿ 2022, 9:22 IST
ಆಶಿಶ್ ಮಿಶ್ರಾ
ಆಶಿಶ್ ಮಿಶ್ರಾ   

ಅಲಹಾಬಾದ್: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ, ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾಗೆ ಅಲಹಾಬಾದ್ ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.

ಕಳೆದ ವರ್ಷ ಅಕ್ಟೋಬರ್‌ 3ರಂದು ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಆಶಿಶ್‌ ಮಿಶ್ರಾ ಹಾಗೂ ಅವರ ಬೆಂಗಾವಲು ಪಡೆಯ ವಾಹನಗಳು ಚಲಿಸಿದ್ದವು. ಬಳಿಕ ಹಿಂಸಾಚಾರ ನಡೆದಿತ್ತು. ಘಟನೆಯಲ್ಲಿ ನಾಲ್ವರು ರೈತರು ಸೇರಿದಂತೆ 8 ಮಂದಿ ಮೃತಪಟ್ಟಿದ್ದರು.

ಲಖಿಂಪುರ ಖೇರಿ ಹಿಂಸಾಚಾರ ಪೂರ್ವಯೋಜಿತ ಎಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ಹೇಳಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿರುವವರ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 279 (ಅಜಾಗರೂಕತೆಯಿಂದ ವಾಹನ ಚಾಲನೆ), 338 (ನಿರ್ಲಕ್ಷ್ಯದಿಂದ ಗಂಭೀರ ಗಾಯಗೊಳ್ಳಲು ಕಾರಣವಾಗುವುದು) ಹಾಗೂ 340 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣರಾಗುವುದು) ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಇದರ ಬದಲಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307ರ (ಕೊಲೆ ಯತ್ನ) ಅಡಿ ಪ್ರಕರಣ ದಾಖಲಿಸಬೇಕು ಎಂದು ಎಸ್‌ಐಟಿ ವಿನಂತಿ ಮಾಡಿತ್ತು.

ADVERTISEMENT

ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನ ಆರಂಭವಾದ ದಿನವೇ ಆಶಿಶ್ ಮಿಶ್ರಾಗೆ ಜಾಮೀನು ದೊರೆತಿರುವುದು ಚರ್ಚೆಗೆ ಗ್ರಾಸವಾಗಿದೆ.

ರೈತ ಸಮುದಾಯದ ಪ್ರಾಬಲ್ಯವಿರುವ ಪಶ್ಚಿಮ ಯುಪಿಯಲ್ಲಿ ಮೊದಲ ಹಂತದ ಮತದಾನ ಗುರುವಾರ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.