ADVERTISEMENT

ಉತ್ತರ ಪ್ರದೇಶ: ಬಿಜೆಪಿ ಶಾಸಕರು, ಸಚಿವರ ವಿರುದ್ಧದ ಪ್ರಕರಣ ವಾಪಸ್‌?

ಮುಖ್ಯಮಂತ್ರಿ ಯೋಗಿ ಸರ್ಕಾರದ ಚಿಂತನೆ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2022, 20:53 IST
Last Updated 11 ಆಗಸ್ಟ್ 2022, 20:53 IST
   

ಲಖನೌ: ಸಚಿವರೊಬ್ಬರ ಮೇಲಿನ ಆರೋಪ ಸಾಬೀತಾಗಿದ್ದು, ಮತ್ತೊಬ್ಬ ಸಚಿವರ ವಿರುದ್ಧ ಜಾಮೀನುರಹಿತ ವಾರಂಟ್ ಜಾರಿಯಾಗುತ್ತಿದ್ದಂತೆಯೇ ಜಾಗೃತವಾಗಿರುವ ಉತ್ತರ ಪ್ರದೇಶ ಸರ್ಕಾರ, ಬಿಜೆಪಿ ಶಾಸಕರು ಹಾಗೂ ಸಚಿವರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಮುಂದಾಗಿದೆ.

ಕಾನೂನು ಇಲಾಖೆಯ ಜೊತೆ ಸಮಾಲೋಚನೆ ನಡೆಸಿದ ಬಳಿಕ ಪ್ರಕರಣಗಳನ್ನು ವಾಪಸ್ ಪಡೆಯುವ ಪ್ರಕ್ರಿಯೆ ಶುರುವಾಗಲಿದೆ ಎಂದು ಮೂಲಗಳು ತಿಳಿಸಿವೆ. ‘ಬಿಜೆಪಿ ಶಾಸಕರು ಹಾಗೂ ಸಚಿವರ ವಿರುದ್ಧ ದಾಖಲಾಗಿರುವ ರಾಜಕೀಯ ಪ್ರೇರಿತ ಪ್ರಕರಣಗಳನ್ನು ಮಾತ್ರ
ವಾಪಸ್ ಪಡೆಯಲಾಗುವುದು. ಗಂಭೀರ ಸ್ವರೂಪದ ಪ್ರಕರಣಗಳನ್ನು ಹಿಂಪಡೆಯುವುದಿಲ್ಲ.ಬಿಜೆಪಿ ಶಾಸಕರ ವಿರುದ್ಧದ ಬಹುತೇಕ ಪ್ರಕರಣಗಳು ಪ್ರತಿಪಕ್ಷಗಳು ಅಧಿಕಾರದಲ್ಲಿದ್ದಾಗ ದಾಖಲಾಗಿದ್ದವು’ ಎಂದು ಬಿಜೆಪಿ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.

ಬಹುತೇಕ ಪ್ರಕರಣಗಳು ರಾಜಕೀಯ ಪ್ರೇರಿತ ಆಗಿರುವ ಕಾರಣಕ್ಕೆ, ಅಂತಹವುಗಳನ್ನು ವಾಪಸ್ ಪಡೆಯುವುದರಲ್ಲಿ ತಪ್ಪೇನಿಲ್ಲ ಎಂದು ಅವರು ಹೇಳಿದ್ದಾರೆ. ರಾಜ್ಯದಲ್ಲಿ ಎಸ್‌ಪಿ ಹಾಗೂ ಬಿಎಸ್‌ಪಿ ಸರ್ಕಾರಗಳು ಅಧಿಕಾರದಲ್ಲಿದ್ದಾಗ, ತಮ್ಮ ಪಕ್ಷದ ಶಾಸಕರು ಹಾಗೂ ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ಪಡೆದಿದ್ದವು ಎಂದು ಅವರು ಹೇಳಿದ್ದಾರೆ.

ADVERTISEMENT

ಉತ್ತರ ಪ್ರದೇಶ ಸರ್ಕಾರದ ಎಂಎಸ್‌ಎಂಇ ಸಚಿವ ರಾಕೇಶ್ ಸಚಾನ್ ಅವರು ಶಸ್ತ್ರಾಸ್ತ್ರ ಕಾಯ್ದೆಯಡಿ ತಪ್ಪಿತಸ್ಥ ಎಂದು ಕಾನ್ಪುರ ಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದೆ. ಬಿಜೆಪಿ ಮಿತ್ರಪಕ್ಷವಾದ ನಿಷಾದ್ ಪಕ್ಷದ ಮುಖ್ಯಸ್ಥ ಸಂಜಯ್ ನಿಷಾದ್ ವಿರುದ್ಧ ಜಾಮೀನುರಹಿತ ವಾರಂಟ್ ಜಾರಿಯಲ್ಲಿದೆ. ಹೀಗಾಗಿ ಆದಿತ್ಯನಾಥ ಸರ್ಕಾರವನ್ನು ಪ್ರತಿಪಕ್ಷಗಳು ತರಾಟೆಗೆ ತೆಗೆದುಕೊಂಡಿದ್ದು, ಸಚಿವರ ವಜಾಕ್ಕೆ ಪಟ್ಟು ಹಿಡಿದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.