ADVERTISEMENT

ಮಾ.25ರಂದು ಯೋಗಿ ಪ್ರಮಾಣ ವಚನ; 2ನೇ ಅವಧಿಗೆ ಉತ್ತರ ಪ್ರದೇಶದ ಚುಕ್ಕಾಣಿ

ಪಿಟಿಐ
Published 19 ಮಾರ್ಚ್ 2022, 18:02 IST
Last Updated 19 ಮಾರ್ಚ್ 2022, 18:02 IST
ಯೋಗಿ ಆದಿತ್ಯನಾಥ್‌
ಯೋಗಿ ಆದಿತ್ಯನಾಥ್‌   

ಲಖನೌ: ಹೊಸದಾಗಿ ಆಯ್ಕೆಯಾಗಿರುವಉತ್ತರಪ್ರದೇಶ ಸರ್ಕಾರವು ಇದೇ 25ರಂದು ಪ್ರಮಾಣ ವಚನ ಸ್ವೀಕರಿಸಲಿದೆ. ಪ್ರಮಾಣ ವಚನ ಕಾರ್ಯಕ್ರಮಕ್ಕಾಗಿ ಅಟಲ್‌ ಬಿಹಾರಿ ವಾಜಪೇಯಿ ಇಕಾನಾ ಕ್ರೀಡಾಂಗಣದಲ್ಲಿ 75 ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನವನೀತ್‌ ಸೆಹಗಲ್‌ ಶನಿವಾರ ಹೇಳಿದ್ದಾರೆ.

ಯೋಗಿ ಆದಿತ್ಯನಾಥ ಮತ್ತು ಸಂಪುಟದ ಸಚಿವರು ಶುಕ್ರವಾರ ಸಂಜೆ ನಾಲ್ಕು ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್‌, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕೇಂದ್ರದ ಇತರ ಸಚಿವರು ಶುಕ್ರವಾರದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ADVERTISEMENT

ಬಿಜೆಪಿ ಆಳ್ವಿಕೆ ಇರುವ ರಾಜ್ಯಗಳ ಮುಖ್ಯಮಂತ್ರಿಗಳು, ಆರ್‌ಎಸ್‌ಎಸ್‌ ನಾಯಕರು, ಬಿಜೆಪಿಯ ಪದಾಧಿಕಾರಿಗಳು ಸಮಾರಂಭಕ್ಕೆ ಹಾಜರಾಗುವ ನಿರೀಕ್ಷೆ ಇದೆ. ವಿರೋಧ ಪಕ್ಷಗಳ ಪ್ರಮುಖ ನಾಯಕರನ್ನೂ ಆಹ್ವಾನಿಸಲಾಗುವುದು ಎಂದು ಮೂಲಗಳು ಹೇಳಿವೆ.

ಆದಿತ್ಯನಾಥ ಅವರು ಸತತ ಎರಡನೇ ಅವಧಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಆಗಲಿದ್ದಾರೆ.

ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 255 ಕ್ಷೇತ್ರಗಳಲ್ಲಿ (ಮೈತ್ರಿ ಪಕ್ಷಗಳು ಸೇರಿ 273) ಗೆಲುವು ಸಾಧಿಸಿದೆ. 1987ರಿಂದ ಇದೇ ಮೊದಲ ಬಾರಿಗೆ ಸತತ ಎರಡನೇ ಬಾರಿಗೆ ಒಂದೇ ಪಕ್ಷವು ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದೆ. ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಮತ್ತು ಮೈತ್ರಿ ಪಕ್ಷಗಳು 125 ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.