ಬಂಧನ
(ಪ್ರಾತಿನಿಧಿಕ ಚಿತ್ರ)
ಡೆಹ್ರಾಡೂನ್: ಉತ್ತರಾಖಂಡ ಸರ್ಕಾರ ಆರಂಭಿಸಿರುವ ‘ಆಪರೇಷನ್ ಕಾಲನೇಮಿ‘ ಕಾರ್ಯಾಚರಣೆಯ ಮೂಲಕ ಸಾಧು–ಸಂತರ ವೇಷ ಧರಿಸಿ ಜನರನ್ನು ವಂಚಿಸುತ್ತಿದ್ದ 34 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇದರೊಂದಿಗೆ ಈ ಕಾರ್ಯಾಚರಣೆಯಡಿಯಲ್ಲಿ ಒಟ್ಟು 82 ನಕಲಿ ಬಾಬಾಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಧರ್ಮದ ಹೆಸರಿನಲ್ಲಿ ಜನರ ನಂಬಿಕೆಯನ್ನು ದುರುಪಯೋಗಪಡಿಸಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಡೆಹ್ರಾಡೂನ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಸಿಂಗ್ ಮಾಹಿತಿ ನೀಡಿದ್ದಾರೆ.
ಕಳೆದ ಮೂರು ದಿನಗಳಲ್ಲಿ ಜಿಲ್ಲೆಯಲ್ಲಿ 82 ಜನರನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಸಿಂಗ್ ತಿಳಿಸಿದ್ದಾರೆ.
ಚಾರ್ ಧಾಮ್ ಯಾತ್ರೆ ಮತ್ತು ಕನ್ವರ್ ಯಾತ್ರೆ ನಡೆಯುತ್ತಿರುವುದರಿಂದ ನಕಲಿ ಬಾಬಾಗಳು ಹೆಚ್ಚು ಸಕ್ರಿಯರಾಗುತ್ತಿರುವುದರಿಂದ ಈ ಅಭಿಯಾನ ಮುಂದುವರಿಯಲಿದೆ ಎಂದು ಸಿಂಗ್ ಹೇಳಿದ್ದಾರೆ.
ಬಂಧಿತರಲ್ಲಿ ಬಾಂಗ್ಲಾದೇಶಿ ಪ್ರಜೆ ರುಕ್ನ್ ರಕಮ್ ಅಲಿಯಾಸ್ ಶಾ ಆಲಂ ಕೂಡ ಸೇರಿದ್ದಾನೆ, ಆತನನ್ನು ಶುಕ್ರವಾರ ಡೆಹ್ರಾಡೂನ್ ಜಿಲ್ಲೆಯ ಸಹಸ್ಪುರ್ ಪ್ರದೇಶದಿಂದ ಬಂಧಿಸಲಾಯಿತು ಎಂದು ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.