ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನೀರ್ಗಲ್ಲು ಕುಸಿದು ನದಿಯಲ್ಲಿ ಪ್ರವಾಹ ಉಂಟಾದ ಪರಿಣಾಮ 13 ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ.
ದುರಂತದಲ್ಲಿ ಇದುವರೆಗೆ 32 ಜನರು ಮೃತಪಟ್ಟಿದ್ದು, ಸುಮಾರು 206 ಜನರು ನಾಪತ್ತೆಯಾಗಿದ್ದಾರೆ ಎಂದು ಅಲ್ಲಿನ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ಎನ್‌ಟಿಪಿಸಿಯ 480 ಮೆಗಾವಾಟ್ ಸಾಮರ್ಥ್ಯದ ತಪೋವನ-ವಿಷ್ಣುಗಡ ಯೋಜನೆ ಮತ್ತು 13.2 ಮೆಗಾವಾಟ್ ಸಾಮರ್ಥ್ಯದ ರಿಷಿ ಗಂಗಾ ಜಲವಿದ್ಯುತ್ ಯೋಜನೆಗಳ ಸುರಂಗಗಳಲ್ಲಿ ನೀರು ನುಗ್ಗಿದ್ದು, ಅಪಾರ ಹಾನಿ ಸಂಭವಿಸಿದೆ.
ರಸ್ತೆ ಸಂಪರ್ಕ ಕಳೆದುಕೊಂಡಿರುವ ಗ್ರಾಮಗಳ ಜನರಿಗೆ ಆಹಾರ ಸಾಮಗ್ರಿಗಳನ್ನು ತಲುಪಿಸಲು ಹೆಲಿಕಾಪ್ಟರ್‌ಗಳನ್ನು ಬಳಸಿಕೊಳ್ಳಲು ಸರ್ಕಾರ ಮುಂದಾಗಿದೆ. ವಿದ್ಯಾರ್ಥಿಗಳಿಗೆ ಶಾಲೆಗಳಿಗೆ ತೆರಳಲು ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಧುಲಿಗಂಗಾ ನದಿ ಪ್ರದೇಶದಲ್ಲಿರುವ ಜುಗ್ಜು, ಜುವಾಗ್ವಾಡ್, ಭನ್ಯಾಲ್, ಗಹಾರ್ ಸೇರಿದಂತೆ ಹಲವು ಗ್ರಾಮಗಳು ರಸ್ತೆ ಸಂಪರ್ಕ ಕಳೆದುಕೊಂಡಿವೆ.
ಇಂಡೋ–ಟಿಬೆಟಿಯನ್ ಪೊಲೀಸ್ ಪಡೆ ಹಾಗೂ ಎನ್ಡಿಆರ್ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಇದುವರೆಗೆ ತಪೋವನ- ವಿಷ್ಣುಗಡ ಯೋಜನೆಯ ಸುರಂಗದಲ್ಲಿ ಸಿಲುಕಿಕೊಂಡಿದ್ದ ಸುಮಾರು 32 ಕಾರ್ಮಿಕರನ್ನು ರಕ್ಷಿಸಲಾಗಿದೆ.
ಇದನ್ನೂ ಓದಿ.. ಉತ್ತರಾಖಂಡಕ್ಕೆ ನೆರವಿನಹಸ್ತ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.