
ಗೋಪೇಶ್ವರ: ಉತ್ತರಾಖಂಡದ ಚಮೋಲಿ ಜಿಲ್ಲೆಯ ವಿಷ್ಣುಗಡ-ಪಿಪಲ್ಕೋಟಿ ಜಲವಿದ್ಯುತ್ ಯೋಜನೆಯ ಸುರಂಗದೊಳಗೆ ಎರಡು ರೈಲುಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 88 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ ನಿರ್ಮಿಸುತ್ತಿರುವ ಯೋಜನೆಯ ಸುರಂಗದೊಳಗೆ ಕಾರ್ಮಿಕರು ಮತ್ತು ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ರೈಲೊಂದು ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ಚಮೋಲಿ ಜಿಲ್ಲಾಧಿಕಾರಿ ಗೌರವ್ ಕುಮಾರ್ ಹೇಳಿದ್ದಾರೆ.
ರೈಲಿನಲ್ಲಿ ಒಟ್ಟು 109 ಜನರಿದ್ದರು. ಆ ಪೈಕಿ 88 ಮಂದಿ ಗಾಯಗೊಂಡಿದ್ದು, ಗೋಪೇಶ್ವರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದೂ ಕುಮಾರ್ ಮಾಹಿತಿ ನೀಡಿದ್ದಾರೆ.
ಚಮೋಲಿ ಜಿಲ್ಲೆಯ ಹೆಲಾಂಗ್ ಮತ್ತು ಪಿಪಲ್ಕೋಟಿ ನಡುವೆ ಅಲಕನಂದಾ ನದಿಗೆ ಅಡ್ಡಲಾಗಿ 444 ಮೆಗಾವ್ಯಾಟ್ ಜಲವಿದ್ಯುತ್ ಯೋಜನೆಯನ್ನು ನಿರ್ಮಿಸಲಾಗುತ್ತಿದೆ. ಈ ಯೋಜನೆಯು ನಾಲ್ಕು ಟರ್ಬೈನ್‌ಗಳ ಮೂಲಕ 111 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿ ಹೊಂದಿದೆ. 2026ರ ವರ್ಷಾಂತ್ಯಕ್ಕೆ ಯೋಜನೆ ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.