ಅಪಘಾತದ ದೃಶ್ಯ
ಪಿಥೋರಗಢ: ಉತ್ತರಾಖಂಡದ ಪಿಥೋರಗಢ ಜಿಲ್ಲೆಯ ಥಾಲ್ ಪ್ರದೇಶದ ಸುನಿ ಗ್ರಾಮದಲ್ಲಿ ಜೀಪ್‌ವೊಂದು ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇತರೆ ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಆರ್ಥಿಕ ನೆರವು ಘೋಷಿಸಿದ್ದಾರೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.
ಮುವಾನಿ ಮಾರುಕಟ್ಟೆಯಿಂದ ಬೊಕ್ತಾ ಗ್ರಾಮಕ್ಕೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಜೀಪ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ ಎಂದು ಥಾಲ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಶಂಕರ್ ಸಿಂಗ್ ರಾವುತ್ ತಿಳಿಸಿದ್ದಾರೆ.
ಘಟನೆಯಲ್ಲಿ ಐವರು ಮಹಿಳೆಯರು, ಜೀಪ್ ಚಾಲಕ ಸೇರಿ ಮೂವರು ಪುರುಷರು ಸಾವಿಗೀಡಾಗಿದ್ದಾರೆ. ಗಾಯಾಳುಗಳನ್ನು ಮುವಾನಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ ರಾಜ್ಯ ವಿಪತ್ತು ನಿರ್ವಹಣಾ ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಸೇರಿದಂತೆ ಪೊಲೀಸ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಶಂಕರ್ ಸಿಂಗ್ ಹೇಳಿದ್ದಾರೆ.
ಘಟನೆ ಸಂಬಂಧ ಎಂಟು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಓವರ್‌ಲೋಡ್ ಮತ್ತು ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿರುವ ಸಾಧ್ಯತೆ ಇದೆ ಎಂದು ಪಿಥೋರಗಢ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ಭೂಪೇಂದ್ರ ಸಿಂಗ್ ಹೇಳಿದ್ದಾರೆ.
ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಮತ್ತು ಗಾಯಾಳುಗಳಿಗೆ ತಲಾ ₹50 ಸಾವಿರ ಪರಿಹಾರ ನೀಡಲಾಗುವುದು. ಮೃತರ ಕುಟುಂಬಗಳೊಂದಿಗೆ ರಾಜ್ಯ ಸರ್ಕಾರ ದೃಢವಾಗಿ ನಿಲ್ಲುತ್ತದೆ. ಗಾಯಾಳುಗಳಿಗೆ ಸಾಧ್ಯವಿರುವ ಎಲ್ಲ ರೀತಿಯ ನೆರವು ಒದಗಿಸುತ್ತೇವೆ ಎಂದು ಸಿಎಂ ಪುಷ್ಕರ್ ಸಿಂಗ್ ಧಾಮಿ ‘ಎಕ್ಸ್’ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.