ವಾರಾಣಸಿ: ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಬೆಳಿಗ್ಗೆ ಇಲ್ಲಿಗೆ ಆಗಮಿಸಿದ್ದು, ತಮ್ಮ ಕ್ಷೇತ್ರದಲ್ಲಿ ನಡೆದ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮಾಹಿತಿ ಪಡೆದಿದ್ದಾರೆ. ಘಟನೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.
ವಾರಾಣಸಿಗೆ ಬಂದಿಳಿದ ತಕ್ಷಣ, ಪ್ರಧಾನಿ ಅವರಿಗೆ ಪೊಲೀಸ್ ಆಯುಕ್ತರು, ವಿಭಾಗೀಯ ಆಯುಕ್ತರು ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರು ನಗರದಲ್ಲಿ ಇತ್ತೀಚೆಗೆ ನಡೆದ ಸಾಮೂಹಿಕ ಅತ್ಯಾಚಾರ ಘಟನೆಯ ಬಗ್ಗೆ ವಿವರಿಸಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟಲು ಸೂಕ್ತ ಕ್ರಮಗಳನ್ನು ಜಾರಿಗೆ ತರಲು ಅವರು ಸೂಚನೆ ನೀಡಿದ್ದಾರೆ ಎಂದು ಹೇಳಿಕೆ ತಿಳಿಸಿದೆ.
ಸಂತ್ರಸ್ತೆಗೆ ಮಾದಕ ದ್ರವ್ಯ ನೀಡಿ, ವಿವಿಧ ಪ್ರದೇಶಗಳಲ್ಲಿ ಹಲವು ಹೋಟೆಲ್‌ಗಳಿಗೆ ಸ್ಥಳಾಂತರಿಸಿ ಅತ್ಯಾಚಾರ ಎಸಗಿದ್ದರು. ಸೋಮವಾರ ಆರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
19 ವರ್ಷದ ಯುವತಿಯನ್ನು 23 ಜನ ಅಪಹರಿಸಿ ಸತತ ಆರು ದಿನಗಳ ಕಾಲ ಅತ್ಯಾಚಾರ ಎಸಗಿದ್ದರು. ಯುವತಿಯ ತಾಯಿಯ ದೂರಿನ ಮೇರೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.