ADVERTISEMENT

ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವುದು ವಿಶೇಷ ಗೌರವ: ಮಾರ್ಗರೇಟ್ ಆಳ್ವಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಜುಲೈ 2022, 12:53 IST
Last Updated 17 ಜುಲೈ 2022, 12:53 IST
ಮಾರ್ಗರೇಟ್ ಆಳ್ವಾ
ಮಾರ್ಗರೇಟ್ ಆಳ್ವಾ   

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆಯಾಗಿರುವುದು ನನಗೆ ಸಂದ ವಿಶೇಷ ಗೌರವವಾಗಿದೆ ಎಂದು ಮಾರ್ಗರೇಟ್ ಆಳ್ವಾ ಭಾನುವಾರ ಪ್ರತಿಕ್ರಿಯಿಸಿದ್ದಾರೆ.

ಈ ಮೊದಲು ನಡೆದ ವಿಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕಿ ಮಾರ್ಗರೇಟ್ ಆಳ್ವಾ ಅವರನ್ನು ಉಪರಾಷ್ಟ್ರಪತಿ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಪ್ರಕಟಿಸಲಾಗಿದೆ.

'ಉಪರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆಯಾಗಿರುವುದು ವಿಶೇಷ ಗೌರವವಾಗಿದೆ. ನನಗೆ ಸಿಕ್ಕಿರುವ ಅವಕಾಶವನ್ನು ವಿನಯದಿಂದ ಸ್ವೀಕರಿಸುತ್ತೇನೆ. ನನ್ನ ಮೇಲೆ ಇಟ್ಟಿರುವ ನಂಬಿಕೆಗಾಗಿ ವಿರೋಧ ಪಕ್ಷದ ನಾಯಕರಿಗೆ ಧನ್ಯವಾದ ಸಲ್ಲಿಸುತ್ತೇನೆ' ಎಂದು ಮಾರ್ಗರೇಟ್ ಆಳ್ವಾ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ನಿವಾಸದಲ್ಲಿ ನಡೆದ 17 ವಿರೋಧ ಪಕ್ಷಗಳ ನಾಯಕರ ಸಭೆಯಲ್ಲಿ ಮಾರ್ಗರೇಟ್ ಆಳ್ವಾ ಅವರನ್ನು ಆಯ್ಕೆ ಮಾಡಲಾಗಿದೆ. 80 ವರ್ಷದ ಮಾರ್ಗರೇಟ್ ಅವರು ಜುಲೈ 19ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಉತ್ತರಾಖಂಡ, ರಾಜಸ್ಥಾನ, ಗುಜರಾತ್‌, ಗೋವಾದ ರಾಜ್ಯಪಾಲೆ ಮತ್ತು ಮಾಜಿ ಕೇಂದ್ರ ಸಚಿವೆಯಾಗಿ ಸೇವೆ ಸಲ್ಲಿಸಿದ್ದ ಮಾರ್ಗರೇಟ್‌ ಆಳ್ವಾ ಐದು ಬಾರಿ ಸಂಸತ್ತಿಗೆ ಆಯ್ಕೆಯಾಗಿದ್ದರು.

ಶನಿವಾರ ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಜಗದೀಪ್‌ ಧನಕರ್‌ ಅವರನ್ನು ಆಯ್ಕೆ ಮಾಡಿತ್ತು. ಉಪರಾಷ್ಟ್ರಪತಿ ಚುನಾವಣೆ ಆಗಸ್ಟ್ 6ರಂದು ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.