ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸಿ.ಪಿ. ರಾಧಾಕೃಷ್ಣನ್ ಅವರನ್ನು ತೆಲುಗು ದೇಶಂ ಪಾರ್ಟಿ(ಟಿಡಿಪಿ) ಪ್ರಧಾನ ಕಾರ್ಯದರ್ಶಿ ಹಾಗೂ ಆಂಧ್ರ ಪ್ರದೇಶದ ಐಟಿ ಸಚಿವ ನಾರಾ ಲೋಕೇಶ್ ಅವರು ಮಂಗಳವಾರ ಭೇಟಿಯಾಗಿದ್ದಾರೆ.
ಟಿಡಿಪಿ ಪಕ್ಷದ ನಾಯಕರು ಹಾಗೂ ಸಂಸದರೊಂದಿಗೆ ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿರುವ ನಾರಾ ಲೋಕೇಶ್, ರಾಧಾಕೃಷ್ಣನ್ ಅವರು ಬೇರೆ ಬೇರೆ ರಾಜ್ಯಗಳಲ್ಲಿ ರಾಜ್ಯಪಾಲರಾಗಿ ಮಾಡಿದ ಕೆಲಸಗಳನ್ನು ಶ್ಲಾಘಿಸಿದ್ದಾರೆ. ಇದೇ ವೇಳೆ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಅವರಿಗೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.
‘ರಾಧಕೃಷ್ಣನ್ ಅವರ ಶಿಸ್ತು, ಪರಿಶ್ರಮ ಮತ್ತು ನಾಯಕತ್ವ ಗುಣಗಳು ಯುವ ಜನಾಂಗಕ್ಕೆ ಮಾದರಿಯಾಗಿದೆ. ಮುಂದಿನ ದಿನಗಳಲ್ಲಿ ಅವರ ಸೇವೆಯು ರಾಷ್ಟ್ರಕ್ಕೆ ಪ್ರಯೋಜನವಾಗಲಿ’ ಎಂದು ನಾರಾ ಲೋಕೇಶ್ ಹೇಳಿದ್ದಾರೆ.
ಮಹಾರಾಷ್ಟ್ರದ ರಾಜ್ಯಪಾಲರಾಗಿರುವ ಸಿ.ಪಿ. ರಾಧಾಕೃಷ್ಣನ್ ಅವರನ್ನು ಎನ್‌ಡಿಎ ಕೂಟವು ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ನಾಮಪತ್ರ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನವಾಗಿದ್ದು, ಸೆಪ್ಟೆಂಬರ್ 9 ರಂದು ಚುನಾವಣೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.