ADVERTISEMENT

ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ: ಮುಂಚೂಣಿಯಲ್ಲಿ ಥಾವರಚಂದ್ ಗೆಹಲೋತ್?

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2025, 16:01 IST
Last Updated 16 ಆಗಸ್ಟ್ 2025, 16:01 IST
ರಾಜ್ಯಪಾಲ ಥಾವರಚಂದ್ ಗೆಹಲೋತ್–ಪ್ರಜಾವಾಣಿ ಚಿತ್ರ
ರಾಜ್ಯಪಾಲ ಥಾವರಚಂದ್ ಗೆಹಲೋತ್–ಪ್ರಜಾವಾಣಿ ಚಿತ್ರ   

ನವದೆಹಲಿ: ಜಗದೀಪ್‌ ಧನಕರ್‌ ಅವರ ದಿಢೀರ್‌ ರಾಜೀನಾಮೆಯಿಂದ ತೆರವಾಗಿರುವ ಉಪ ರಾಷ್ಟ್ರಪತಿ ಹುದ್ದೆಗೆ ನಡೆಯಲಿರುವ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯ ಆಯ್ಕೆಯಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್ ಹೆಸರು ಮುಂಚೂಣಿಯಲ್ಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಭಾನುವಾರ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಉಪ ರಾಷ್ಟ್ರಪತಿ ಅಭ್ಯರ್ಥಿಯನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ. ಸೋಮವಾರ ಅಧಿಕೃತವಾಗಿ ತನ್ನ ಅಭ್ಯರ್ಥಿಯ ಹೆಸರು ಘೋಷಿಸುವ ನಿರೀಕ್ಷೆಯಿದೆ.

ಎನ್‌ಡಿಎ ಮಿತ್ರಪಕ್ಷಗಳ ಸಭೆ ಮಂಗಳವಾರ ನಡೆಯಲಿದ್ದು, ಉಳಿದ ಪಕ್ಷಗಳು ತನ್ನ ಅಭ್ಯರ್ಥಿಗೆ ಬೆಂಬಲ ವ್ಯಕ್ತಪಡಿಸಲಿವೆ. ಇದೇ ಸಭೆಯಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಅವರು ಅಭ್ಯರ್ಥಿಯ ಹೆಸರು ಘೋಷಿಸುವ ಸಾಧ್ಯತೆಯಿದೆ. ನಾಮಪತ್ರ ಸಲ್ಲಿಕೆಗೆ ಆಗಸ್ಟ್‌ 21 ಕೊನೆಯ ದಿನ.

ADVERTISEMENT

‘ನಾಮಪತ್ರ ಸಲ್ಲಿಕೆಯ ದಿನ ಬಿಜೆಪಿಯು ತನ್ನ ಶಕ್ತಿಪ್ರದರ್ಶನ ಮಾಡಲಿದೆ. ಬಿಜೆಪಿ ಅಧಿಕಾರದಲ್ಲಿರುವ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಕೂಡ ಭಾಗವಹಿಸಲಿದ್ದಾರೆ’ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಕಳೆದ ವಾರ ಸಭೆ ಸೇರಿದ್ದ ಎನ್‌ಡಿಎ ಮಿತ್ರಪಕ್ಷಗಳು, ಉಪ ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆಯ ನಿರ್ಧಾರವನ್ನು ಮೋದಿ ಅವರಿಗೆ ಬಿಟ್ಟಿದ್ದವು. ಸೆಪ್ಟೆಂಬರ್‌ 9ರಂದು ಮತದಾನ ನಡೆಯಲಿದೆ. ಉಪ ರಾಷ್ಟ್ರಪತಿ ಹುದ್ದೆಗೆ ವಿರೋಧ ಪಕ್ಷಗಳು ತಮ್ಮ ಅಭ್ಯರ್ಥಿಯನ್ನು ಆಯ್ಕೆ ಮಾಡಲಿವೆಯೇ ಎಂಬುದು ಕುತೂಹಲ ಮೂಡಿಸಿದೆ.

ಬಿಜೆಪಿ ನಿಷ್ಠರಿಗೆ ಮಣೆ

ಧನಕರ್‌ ವರ್ತನೆಯಿಂದ ಮುಜುಗರಕ್ಕೀಡಾಗಿರುವ ಬಿಜೆಪಿ ವರಿಷ್ಠರು ಈ ಬಾರಿ ಪಕ್ಷ ನಿಷ್ಠರಿಗೆ ಮಣೆ ಹಾಕಲು ನಿರ್ಧರಿಸಿದ್ದಾರೆ. ಪಕ್ಷದ ಉನ್ನತ ಮೂಲಗಳ ಪ್ರಕಾರ ಕರ್ನಾಟಕ ರಾಜ್ಯಪಾಲ ಥಾವರಚಂದ್ ಗೆಹಲೋತ್ ಗುಜರಾತ್‌ ರಾಜ್ಯಪಾಲ ದೇವವ್ರತ್‌ ಆಚಾರ್ಯ ಹೆಸರು ಮುಂಚೂಣಿಯಲ್ಲಿವೆ. ಉಳಿದಂತೆ ದೆಹಲಿಯ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ. ಸಕ್ಸೇನಾ ಬಿಹಾರದ ರಾಜ್ಯಪಾಲ ಆರೀಫ್‌ ಮೊಹಮ್ಮದ್‌ ಖಾನ್‌ ಆರ್‌ಎಸ್‌ಎಸ್‌ ನಾಯಕ ಶೇಷಾದ್ರಿಚಾರಿ ಹೆಸರು ಕೂಡ ಕೇಳಿಬಂದಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.