ವಿ.ಕೆ. ಸೆಕ್ಸೇನಾ, ಆರಿಫ್ ಖಾನ್
ನವದೆಹಲಿ: ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟಂಬರ್ 9ಕ್ಕೆ ಚುನಾವಣೆ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಈಗಾಗಲೇ ಮೊದಲ ಹಂತದ ಸಭೆ ನಡೆಸಿ ಒಮ್ಮತದ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಹೊಣೆಯನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ನೀಡಲಾಗಿದೆ.
ನಾಳೆ (ಆ.17) ನಡೆಯಲಿರುವ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಅಭ್ಯರ್ಥಿ ಆಯ್ಕೆಯ ಘೋಷಣೆ ಆಗಲಿದೆ ಎಂದು ಬಿಜೆಪಿಯ ಉನ್ನತ ಮೂಲಗಳು ತಿಳಿಸಿವೆ. ಈ ಸಭೆಯಲ್ಲಿ ಬಿಜೆಪಿ ಹಾಗೂ ಎನ್‌ಡಿಎ ಮುಖ್ಯಮಂತ್ರಿಗಳು ಕೂಡ ಭಾಗವಹಿಸಲಿದ್ದಾರೆ.
ಈಗಾಗಲೇ ದೆಹಲಿ ಸರ್ಕಾರದ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸೆಕ್ಸೇನಾ ಹಾಗೂ ಬಿಹಾರ ರಾಜ್ಯಪಾಲ ಆರಿಫ್ ಮೊಹಮದ್ ಖಾನ್ ಅವರ ಹೆಸರುಗಳು ಅಂತಿಮಗೊಂಡಿದ್ದು ಸಂಸದೀಯ ಮಂಡಳಿ ಸಭೆಯಲ್ಲಿ ಒಬ್ಬರ ಹೆಸರನ್ನು ಘೋಷಣೆ ಮಾಡಲಾಗುತ್ತದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ, ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್, ಸಿಕ್ಕಿಂ ರಾಜ್ಯಪಾಲ ಓಂ ಮಾಥುರ್ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಚಿಂತಕ ಶೇಷಾದ್ರಿ ಚಾರಿ, ರಾಜ್ಯಸಭೆ ಉಪಾಧ್ಯಕ್ಷ ಹರಿವಂಶ್ ಅವರ ಹೆಸರಗಳು ಉಪರಾಷ್ಟ್ರಪತಿ ಅಭ್ಯರ್ಥಿಯ ರೇಸ್‌ನಲ್ಲಿವೆ.
ಅಚ್ಚರಿ ಎಂಬಂತೆ ಈ ಮೇಲಿನ ಐವರು ಅಭ್ಯರ್ಥಿಗಳಲ್ಲಿ ಒಬ್ಬರ ಹೆಸರನ್ನು ಅಂತಿಮಗೊಳಿಸುವ ಸಾಧ್ಯತೆಗಳು ಇವೆ ಎನ್ನಲಾಗಿದೆ.
ಉಪರಾಷ್ಟ್ರಪತಿ ಅಭ್ಯರ್ಥಿ ಬಿಜೆಪಿ ಪಕ್ಷದವರೇ ಆಗಿರುತ್ತಾರೆ, ಅವರು ಆರ್‌ಎಸ್‌ಎಸ್ ಒಡನಾಡಿಯಾಗಿರುತ್ತಾರೆ ಎಂದು ಈ ಹಿಂದೆ ಬಿಜೆಪಿ ನಾಯಕರು ಸ್ಪಷ್ಟಪಡಿಸಿದ್ದರು.
ಜೊತೆಗೆ, ಬಿಹಾರ ವಿಧಾನಸಭಾ ಚುನಾವಣೆ ಹಾಗೂ ದೇಶದ ರಾಜಕೀಯ ಬೆಳವಣಿಗಳನ್ನು ಗಮನದಲ್ಲಿಟ್ಟುಕೊಂಡು ಅಭ್ಯರ್ಥಿಯನ್ನು ಘೋಷಣೆ ಮಾಡಲಾಗುವುದು ಎಂದು ಬಿಜೆಪಿ ಹೇಳಿದೆ.
ಆಗಸ್ಟ್ 7ರಂದು ಚುನಾವಣಾ ಆಯೋಗ, ಉಪರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಿತ್ತು. ಆಗಸ್ಟ್ 21ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಆಗಸ್ಟ್ 25ಕ್ಕೆ ನಾಮಪತ್ರ ಹಿಂಪಡೆಯಲು ಕೊನೆ ದಿನ. ಈಗಾಗಲೇ 18 ನಾಮಪತ್ರಗಳು ಸಲ್ಲಿಕೆಯಾಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.