ADVERTISEMENT

ಹಂತ ಹಂತವಾಗಿ SIR: 2026ರಲ್ಲಿ ವಿಧಾನಸಭಾ ಚುನಾವಣೆ ನಡೆಯುವ ರಾಜ್ಯಗಳತ್ತ EC ಚಿತ್ತ

ಪಿಟಿಐ
Published 10 ಅಕ್ಟೋಬರ್ 2025, 15:34 IST
Last Updated 10 ಅಕ್ಟೋಬರ್ 2025, 15:34 IST
ಚುನಾವಣಾ ಆಯೋಗ
ಚುನಾವಣಾ ಆಯೋಗ   

ನವದೆಹಲಿ: ಕೇಂದ್ರ ಚುನಾವಣಾ ಆಯೋಗವು ದೇಶದಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ಹಂತ ಹಂತವಾಗಿ ನಡೆಸಲು ಸಿದ್ಧತೆ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿರುವ ರಾಜ್ಯಗಳ ಮೂಲಕ ಈ ಪ್ರಕ್ರಿಯೆಯನ್ನು ಆರಂಭಿಸುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ 2026ರಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಈ ಐದು ಕಡೆಗಳಲ್ಲಿ ಅಲ್ಲದೆ ಇತರ ಕೆಲವು ರಾಜ್ಯಗಳಲ್ಲೂ ಎಸ್‌ಐಆರ್‌ ನಡೆಯಲಿದೆ.

ADVERTISEMENT

ಬಿಹಾರದಲ್ಲಿ ಎಸ್ಐಆರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಸೆಪ್ಟೆಂಬರ್‌ 30ರಂದು ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ. ಪಟ್ಟಿಯಲ್ಲಿ 7.42 ಕೋಟಿ ಮತದಾರರ ಹೆಸರು ಇದೆ.

ಎಲ್ಲ ರಾಜ್ಯಗಳಲ್ಲಿ ಎಸ್‌ಐಆರ್‌ಗೆ ಸಿದ್ಧತೆ ನಡೆಯುತ್ತಿದೆ ಎಂದು ಬಿಹಾರ ವಿಧಾನಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟಿಸುವ ಸಂದರ್ಭದಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೇಳಿದ್ದರು.

ವಿವಿಧ ರಾಜ್ಯಗಳಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಪ್ರಾರಂಭಿಸುವ ದಿನಾಂಕಗಳನ್ನು ನಿರ್ಧರಿಸಲು ಮೂವರು ಚುನಾವಣಾ ಆಯುಕ್ತರು ಸಭೆ ನಡೆಸಲಿದ್ದಾರೆ ಎಂದು ಅವರು ತಿಳಿಸಿದ್ದರು.

ಎಸ್‌ಐಆರ್‌ ಕುರಿತು ವಿವಿಧ ರಾಜ್ಯಗಳ ಮುಖ್ಯ ಚುನಾವಣಾ ಅಧಿಕಾರಿಗಳೊಂದಿಗೆ ಆಯೋಗದ ಹಿರಿಯ ಅಧಿಕಾರಿಗಳು ಈಚೆಗೆ ಮಹತ್ವದ ಸಭೆ ನಡೆಸಿದ್ದರು. ಎಸ್‌ಐಆರ್‌ ಪ್ರಕ್ರಿಯೆಗೆ ಸೆಪ್ಟೆಂಬರ್‌ 30ರೊಳಗೆ ಸಜ್ಜಾಗುವಂತೆ ಚುನಾವಣಾ ಆಯೋಗವು ವಿವಿಧ ರಾಜ್ಯಗಳ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಕೇಳಿಕೊಂಡಿತ್ತು.

ತಮ್ಮ ತಮ್ಮ ರಾಜ್ಯಗಳಲ್ಲಿ ಕೊನೆಯದಾಗಿ ಎಸ್ಐಆರ್‌ ಪ್ರಕ್ರಿಯೆ ನಡೆದ ಬಳಿಕ ಪ್ರಕಟಿಸಲಾಗಿರುವ ಮತದಾರರ ಪಟ್ಟಿಯನ್ನು ಸಿದ್ಧವಾಗಿಡುವಂತೆ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳಿಗೆ ನಿರ್ದೇಶನ ನೀಡಿತ್ತು.

ಹಲವು ರಾಜ್ಯಗಳ ಚುನಾವಣಾಧಿಕಾರಿಗಳು ತಮ್ಮ ಕೊನೆಯ ಎಸ್‌ಐಆರ್‌ ನಂತರ ಪ್ರಕಟವಾದ ಮತದಾರರ ಪಟ್ಟಿಗಳು ಈಗಾಗಲೇ ವೆಬ್‌ಸೈಟ್‌ಗಳಲ್ಲಿ ಲಭ್ಯವಾಗುವಂತೆ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.