ಕೋಲ್ಕತ್ತ: 'ಪಶ್ಚಿಮ ಬಂಗಾಳದಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆ ಜಾರಿಯಾಗುವುದಿಲ್ಲ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು (ಶನಿವಾರ) ಹೇಳಿದ್ದಾರೆ.
ವಕ್ಫ್ (ತಿದ್ದುಪಡಿ) ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ಮಮತಾ ಈ ಹೇಳಿಕೆ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮಮತಾ, 'ದಯವಿಟ್ಟು ಎಲ್ಲ ಧರ್ಮದ ಜನರು ಸಂಯಮ ಕಾಪಾಡಿಕೊಳ್ಳಬೇಕು' ಎಂದು ಮನವಿ ಮಾಡಿದ್ದಾರೆ.
'ಧರ್ಮದ ಹೆಸರಿನಲ್ಲಿ ಯಾವುದೇ ಅಧರ್ಮೀಯ ವರ್ತನೆಯಲ್ಲಿ ತೊಡಗದಿರಿ. ಪ್ರತಿಯೊಂದು ಜೀವವೂ ಅಮೂಲ್ಯವಾಗಿದೆ. ರಾಜಕೀಯ ಲಾಭಕ್ಕಾಗಿ ಗಲಭೆಗಳಿಗೆ ಪ್ರಚೋದನೆ ನೀಡದಿರಿ. ಗಲಭೆಗಳನ್ನು ಪ್ರಚೋದಿಸುವವರು ಸಮಾಜಕ್ಕೆ ಕೆಡುಕನ್ನು ಉಂಟುಮಾಡಲಿದ್ದಾರೆ' ಎಂದು ಹೇಳಿದ್ದಾರೆ.
ಕಾಯ್ದೆಯನ್ನು ವಿರೋಧಿಸಿ ಶುಕ್ರವಾರ ಮಾಲ್ಡಾ, ಮುರ್ಷಿದಾಬಾದ್, ದಕ್ಷಿಣ 24 ಪರಗಣ ಹಾಗೂ ಹೂಗ್ಲಿ ಜಿಲ್ಲೆಗಳಲ್ಲಿ ನಡೆದ ಪ್ರತಿಭಟನೆ ವಿಕೋಪಕ್ಕೆ ತಿರುಗಿದ್ದು, ಪೊಲೀಸ್ ವಾಹನ ಸೇರಿದಂತೆ ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.
'ನೆನೆಪಿಡಿ, ಕಾನೂನನ್ನು ನಾವು ರಚಿಸಿಲ್ಲ. ಕೇಂದ್ರವು ರಚಿಸಿದೆ. ಆದ್ದರಿಂದ ನಿಮಗೆ ಬೇಕಾದ ಉತ್ತರವನ್ನು ಕೇಂದ್ರದಿಂದ ಪಡೆಯಬೇಕು. ಈ ವಿಷಯದಲ್ಲಿ ನಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದೇವೆ. ನಾನು ಈ ಕಾನೂನನ್ನು ಬೆಂಬಲಿಸುವುದಿಲ್ಲ. ಈ ಕಾನೂನು ರಾಜ್ಯದಲ್ಲಿ ಅನುಷ್ಠಾನಗೊಳ್ಳುವುದಿಲ್ಲ. ಹಾಗಾಗಿ ಗಲಭೆ ಯಾತಕ್ಕಾಗಿ' ಎಂದು ಅವರು ಹೇಳಿದ್ದಾರೆ.
'ಗಲಭೆ ಹಾಗೂ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು' ಎಂದು ಬ್ಯಾನರ್ಜಿ ಎಚ್ಚರಿಸಿದ್ದಾರೆ.
'ಹಿಂಸಾಚಾರವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಕೆಲವು ರಾಜಕೀಯ ಪಕ್ಷಗಳು ಧರ್ಮವನ್ನು ದುರುಪಯೋಗಪಡಿಸಿಕೊಳ್ಳಲು ಯತ್ನಿಸುತ್ತಿವೆ. ಧರ್ಮ ಎಂದರೆ ಮಾನವೀಯತೆ, ಸದ್ಭಾವನೆ, ನಾಗರಿಕತೆ ಹಾಗೂ ಸಾಮರಸ್ಯ ಆಗಿದೆ. ಎಲ್ಲರೂ ಶಾಂತಿ ಹಾಗೂ ಸಾಮರಸ್ಯವನ್ನು ಕಾಪಾಡಿಕೊಳ್ಳುವಂತೆ ವಿನಂತಿಸುತ್ತೇನೆ' ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.