ನವದೆಹಲಿ: ವಕ್ಫ್ (ತಿದ್ದುಪಡಿ) ಕಾಯ್ದೆ–2025ರ ಮೂರು ಪ್ರಮುಖ ವಿಚಾರಗಳ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಾದ ಆಲಿಸಿದ್ದ ಸುಪ್ರೀಂ ಕೋರ್ಟ್ ಸೋಮವಾರ ಮಧ್ಯಂತರ ಆದೇಶ ಪ್ರಕಟಿಸಲಿದೆ.
ಈ ಪ್ರಕರಣಕ್ಕೆ ಸಂಬಂಧಿಸಿ, ಮೇ 22ರಂದು ಎರಡು ಕಡೆಗಳ ವಾದ ಆಲಿಸಿದ್ದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ನ್ಯಾಯಪೀಠವು ಮಧ್ಯಂತರ ಆದೇಶವನ್ನು ಕಾಯ್ದಿರಿಸಿತ್ತು.
ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನ ಪ್ರಕಾರ, ಸೆ.15ರಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ಆದೇಶ ಪ್ರಕಟಿಸಲಿದೆ ಎಂದು ತಿಳಿಸಲಾಗಿದೆ.
ವಕ್ಫ್ (ತಿದ್ದುಪಡಿ) ಕಾಯ್ದೆ 2025ರಲ್ಲಿ ಸೂಚಿಸಿರುವಂತೆ ‘ಕಾನೂನು ಮೂಲಕ, ಬಳಕೆ ಮೂಲಕ ಮತ್ತು ದಾಖಲೆಪತ್ರ ಮೂಲಕ ವಕ್ಫ್’ ಎಂದು ಘೋಷಿಸಿರುವ ಜಮೀನಿನ ಡಿನೋಟಿಫಿಕೇಶನ್ ಅಧಿಕಾರ ಯಾರದ್ದು ಎಂಬುದೂ ಇತ್ಯರ್ಥವಾಗಲಿದೆ. ವಕ್ಫ್ ಕಾಯ್ದೆ ತಿದ್ದುಪಡಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿ ಸತತ ಮೂರು ದಿನ ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದರು. ಮೂರು ವಿಚಾರಗಳಿಗೆ ಅರ್ಜಿದಾರರು ತಡೆಕೋರಿ ಸಲ್ಲಿಸಿದ್ದ ವಿಚಾರಕ್ಕೆ ಸಂಬಂಧಿಸಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದ್ದರು.
ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆಯು ಏಪ್ರಿಲ್ 3 ಹಾಗೂ 4ರಂದು ಅಂಗೀಕಾರಗೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.