ರಾಹುಲ್ ಗಾಂಧಿ
ಪಿಟಿಐ ಚಿತ್ರ
ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಯನ್ನು ಮುಸ್ಲಿಮರ ವಿರುದ್ಧ ಅಸ್ತ್ರವಾಗಿ ಬಳಸಲಾಗುತ್ತಿದೆ ಎಂದು ಲೋಕಸಭಾ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
ಈ ಬಗ್ಗೆ ಅವರು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.
‘ಮುಸ್ಲಿಮರ ವೈಯಕ್ತಿಕ ಕಾನೂನುಗಳು ಮತ್ತು ಅವರ ಆಸ್ತಿ ಹಕ್ಕುಗಳನ್ನು ಕಸಿದುಕೊಳ್ಳುವ ಅಸ್ತ್ರವಾಗಿ ಮಸೂದೆಯನ್ನು ತಿದ್ದುಪಡಿ ಮಾಡಲಾಗಿದೆ. ಮುಸ್ಲಿಮರನ್ನು ಮೂಲೆಗುಂಪು ಮಾಡುವ ಉದ್ದೇಶವನ್ನು ಇದು ಹೊಂದಿದೆ’ ಎಂದು ಹೇಳಿದ್ದಾರೆ.
‘ಆರ್‌ಎಸ್‌ಎಸ್, ಬಿಜೆಪಿ ಸಂವಿಧಾನದ ಮೇಲೆ ನಡೆಸುತ್ತಿರುವ ಈ ದಾಳಿ ಇಂದು ಮುಸ್ಲಿಮರನ್ನು ಗುರಿಯಾಗಿಸಿಕೊಂಡಿದೆ. ಆದರೆ, ಭವಿಷ್ಯದಲ್ಲಿ ಇತರ ಸಮುದಾಯಗಳನ್ನು ಗುರಿಯಾಗಿಸಿಕೊಳ್ಳಲು ಸಾಧ್ಯತೆಯಿದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
‘ಈ ಮಸೂದೆಯು ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸುತ್ತದೆ’ ಎಂದು ತಿಳಿಸಿದ್ದಾರೆ.
ಸತತ 12 ಗಂಟೆಗಳ ಸುದೀರ್ಘ ಚರ್ಚೆಯ ನಂತರ ಲೋಕಸಭೆಯು ತಡರಾತ್ರಿ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಿತು. ಮಸೂದೆಯ ಪರವಾಗಿ 288 ಹಾಗೂ ವಿರುದ್ಧವಾಗಿ 232 ಮತಗಳನ್ನು ಬಿದ್ದಿದ್ದವು.
ಈ ಮಸೂದೆಯು ಇಂದು(ಗುರುವಾರ) ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.