ಮಿಡ್ನಾಪುರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ Credit: https://midnaporemmc.ac.in/hospital.html
ಕೋಲ್ಕತ್ತ: ಮಿಡ್ನಾಪುರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (ಎಂಎಂಸಿಎಚ್) ನವಜಾತ ಶಿಶುವಿಗೆ ಜನ್ಮ ನೀಡಿದ ಕೆಲವೇ ನಿಮಿಷಗಳಲ್ಲಿ ಬಾಣಂತಿಯೊಬ್ಬರು ಮೃತಪಟ್ಟಿದ್ದಾರೆ. ಜತೆಗೆ, ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇತರೆ ನಾಲ್ವರು ಬಾಣಂತಿಯರ ಸ್ಥಿತಿಯೂ ಗಂಭೀರವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಮಾಣಿತ ಗುಣಮಟ್ಟ ಹೊಂದಿರದ ‘ರಿಂಗರ್ಸ್ ಲ್ಯಾಕ್ಟೇಟ್’ ಐವಿ ದ್ರಾವಣವನ್ನು ನೀಡಿರುವುದರಿಂದ ಬಾಣಂತಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕುರಿತು ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.
ಬಾಣಂತಿಯೊಬ್ಬರ ಸಾವು ಮತ್ತು ಇತರೆ ನಾಲ್ವರು ಮಹಿಳೆಯರ ಆರೋಗ್ಯ ಸ್ಥಿತಿಯೂ ಗಂಭೀರವಾಗಿರುವ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಆರೋಗ್ಯ ಇಲಾಖೆ ಪ್ರಕರಣ ಕುರಿತು ತನಿಖೆ ನಡೆಸಲು 13 ಸದಸ್ಯರ ಸಮಿತಿಯೊಂದನ್ನು ರಚಿಸಿದೆ.
ಮೃತ ಬಾಣಂತಿಯ ಪತಿ ಹಾಗೂ ಇತರ ಮಹಿಳಾ ರೋಗಿಗಳ ಕುಟುಂಬಸ್ಥರು ನೀಡಿರುವ ದೂರುಗಳನ್ನು ಆಧರಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕರ್ನಾಟಕದ ಬಳ್ಳಾರಿ, ರಾಯಚೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇತ್ತೀಚೆಗೆ ಸಂಭವಿಸಿದ ಗರ್ಭಿಣಿಯರ ಸರಣಿ ಸಾವಿನ ಪ್ರಕರಣಗಳ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಪಶ್ಚಿಮ ಬಂಗಾಳದ ‘ಪಶ್ಚಿಮ್ ಬಂಗಾ ಫಾರ್ಮಾಸ್ಯುಟಿಕಲ್ಸ್’ ಕಂಪನಿ ಪೂರೈಸಿರುವ ‘ರಿಂಗರ್ಸ್ ಲ್ಯಾಕ್ಟೇಟ್’ ಐವಿ ದ್ರಾವಣವನ್ನು ಬಳಸದಂತೆ ಆದೇಶ ಹೊರಡಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.