ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ 2026ರ ವಿಧಾನಸಭಾ ಚುನಾವಣೆಯ ವೇಳೆಗೆ ಹೆಚ್ಚುವರಿಯಾಗಿ 14 ಸಾವಿರ ಮತಗಟ್ಟೆಗಳು ಸ್ಥಾಪನೆಯಾಗಲಿವೆ. ಸದ್ಯ ರಾಜ್ಯದ 294 ವಿಧಾನಸಭಾ ಕ್ಷೇತ್ರಗಳಲ್ಲಿ 78 ಸಾವಿರ ಮತಗಟ್ಟೆಗಳಿವೆ. ಮತಗಟ್ಟೆಗಳ ಮರು ವಿಂಗಡಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಆ.29ರಂದು ಸರ್ವಪಕ್ಷಗಳ ಸಭೆ ಕರೆದಿದೆ.
‘ಸುಗಮ ಮತದಾನಕ್ಕೆ ಅವಕಾಶ ಕಲ್ಪಿಸಲು, 1,200ಕ್ಕಿಂತ ಹೆಚ್ಚಿನ ಮತದಾರರನ್ನು ಹೊಂದಿರುವ ಮತಗಟ್ಟೆಗಳನ್ನು ಗುರುತಿಸಿ ಅದನ್ನು ಮರು ವಿಂಗಡಿಸಲಾಗುವುದು. ಹೆಚ್ಚುವರಿ ಮತಗಟ್ಟೆಗಳ ಸ್ಥಾಪನೆಯಿಂದ ಒಟ್ಟು ಮತಗಟ್ಟೆಗಳ ಸಂಖ್ಯೆ 92 ಸಾವಿರಕ್ಕೆ ಏರಿಕೆಯಾಗಲಿದೆ’ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ.
ಮತಗಟ್ಟೆಗಳ ಸಂಖ್ಯೆಗೆ ಅನುಗುಣವಾಗಿ ರಾಜಕೀಯ ಪಕ್ಷಗಳು ಬೂತ್ ಮಟ್ಟದ ಏಜೆಂಟರನ್ನು (ಬಿಎಲ್‌ಎ) ನಿಯೋಜಿಸಬೇಕಿದೆ.
ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಲೋಪ ಎಸಗಿದ ಆರೋಪದಡಿ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಮತ್ತು ಪೂರ್ವ ಮೇದಿನಿಪುರ ಜಿಲ್ಲೆಗಳ ನಾಲ್ವರು ಅಧಿಕಾರಿಗಳನ್ನು (ಇಆರ್‌ಒ) ರಾಜ್ಯ ಸರ್ಕಾರ ಅಮಾನತುಗೊಳಿಸಿದ್ದು, ಇಲಾಖಾ ವಿಚಾರಣೆಗೆ ಆದೇಶಿಸಿದೆ. ಆದರೆ, ಚುನಾವಣಾ ಆಯೋಗದ ಸೂಚನೆಯಂತೆ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.