ADVERTISEMENT

ದುರ್ಗಾಪುರ ಅತ್ಯಾಚಾರ ‍ಪ್ರಕರಣ: ಮತ್ತಿಬ್ಬರ ಬಂಧನ, OSCWಯಿಂದ ಸಂತ್ರಸ್ತೆ ಭೇಟಿ

ಪಿಟಿಐ
Published 13 ಅಕ್ಟೋಬರ್ 2025, 9:24 IST
Last Updated 13 ಅಕ್ಟೋಬರ್ 2025, 9:24 IST
   

ಕೋಲ್ಕತ್ತ: ಪಶ್ಚಿಮ ಬಂಗಾಳದ ಪಶ್ಚಿಮ ವರ್ದ್‌ಮಾನ್‌ ಜಿಲ್ಲೆಯ ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಈ ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರು ಕಸ್ಟಡಿಯಲ್ಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಂತ್ರಸ್ತೆ ನೀಡಿದ ದೂರಿನ ಆಧಾರದಡಿ ಪ್ರಕರಣದಲ್ಲಿ ಭಾಗಿಯಾಗಿದ್ದ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಶುಕ್ರವಾರ ರಾತ್ರಿ ಒಡಿಶಾದ ಜಲೇಶ್ವರ ಮೂಲದ ಎರಡನೇ ವರ್ಷದ ವೈದ್ಯ ವಿದ್ಯಾರ್ಥಿನಿಯನ್ನು ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಅರಣ್ಯ ಪ್ರದೇಶಕ್ಕೆ ಹೊತ್ತುಕೊಂಡು ಹೋಗಿ ಅತ್ಯಾಚಾರ ಎಸಲಾಗಿತ್ತು. ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜು ಆವರಣದ ಹೊರಗಡೆ ಸ್ನೇಹಿತನೊಂದಿಗೆ ರಾತ್ರಿ ಊಟಕ್ಕೆ ತೆರಳಿದ್ದ ವೇಳೆ ಈ ಘಟನೆ ಸಂಭವಿಸಿತ್ತು.

ಈ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಭಾನುವಾರ ಬಂಧಿಸಲಾಗಿತ್ತು.

ಈ ಘಟನೆಯನ್ನು ಆಘಾತಕಾರಿ ಎಂದು ಆತಂಕ ವ್ಯಕ್ತಪಡಿಸಿದ್ದ ಮಮತಾ ಬ್ಯಾನರ್ಜಿ ಅವರು, ತಡರಾತ್ರಿ ಮಹಿಳೆಯರು ಹೊರಗೆ ಹೋಗಬೇಡಿ ಎಂಬ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ನಮ್ಮ ಸರ್ಕಾರ ಇಂತಹ ಘಟನೆಗಳನ್ನು ಸಹಿಸುವುದಿಲ್ಲ ಎಂದೂ ಹೇಳಿದ್ದರು.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಪ್ರತಿಕ್ರಿಯಿಸಿದ್ದು, ಬಂಧಿತ ಆರೋಪಿಗಳಲ್ಲಿ ಕನಿಷ್ಠ ಒಬ್ಬನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನಾಗಿರುತ್ತಾನೆ ಎಂದು ಆರೋಪಿಸಿದ್ದಾರೆ.

ಈ ಘಟನೆಗೆ ಸಂಬಂಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಒತ್ತಾಯಿಸಿದ್ದಾರೆ.

ಒಡಿಶಾ ರಾಜ್ಯ ಮಹಿಳಾ ಆಯೋಗದ (ಒಎಸ್‌ಸಿಡ್ಲ್ಯೂ) ಅಧ್ಯಕ್ಷೆ ಸೋವನಾ ಮೊಹಂತಿ ಇಂದು (ಸೋಮವಾರ) ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದು, ಸಂತ್ರಸ್ತೆಯೊಂದಿಗೆ ಮಾತನಾಡಲಿದ್ದಾರೆ. ಆಕೆಯ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಲಿದ್ದಾರೆ. ಆಕೆಯ ಪೋಷಕರನ್ನು ಭೇಟಿ ಮಾಡಿ, ಸ್ಥಳೀಯ ಪೊಲೀಸರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.