
ಸುವೇಂದು ಅಧಿಕಾರಿ
(ಪಿಟಿಐ ಚಿತ್ರ)
ಕೋಲ್ಕತ್ತ: ಮುಂದಿನ ವರ್ಷ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸಮಯದಲ್ಲಿ ‘ಪಕ್ಷಪಾತಿ’ ಪೊಲೀಸ್ ಅಧಿಕಾರಿಗಳನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸದಿರುವಂತೆ ಒತ್ತಾಯಿಸಿ ಬಿಜೆಪಿಯ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.
ಇತ್ತೀಚೆಗೆ ದಿಘಾದಲ್ಲಿ ಪೊಲೀಸ್ ಅಧಿಕಾರಿಗಳ ಸಮಾವೇಶ ನಡೆದಿದ್ದು, ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರನ್ನು ನಾಲ್ಕನೇ ಅವಧಿಗೆ ಮುಖ್ಯಮಂತ್ರಿಯಾಗಿ ನೋಡುವ ಬಯಕೆಯನ್ನು ಅಲ್ಲಿ ಭಾಗವಹಿಸಿದ್ದ ಹಲವರು ವ್ಯಕ್ತಪಡಿಸಿದ್ದಾರೆ ಎಂದು ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ಸುವೇಂದು ಹೇಳಿಕೊಂಡಿದ್ದಾರೆ.
‘ಈ ಪೊಲೀಸ್ ಅಧಿಕಾರಿಗಳು ತಾವು ತಟಸ್ಥವಾಗಿರಬೇಕು ಎಂಬ ನೀತಿಯನ್ನು ಕಾಯ್ದುಕೊಳ್ಳುವುದನ್ನು ಬಿಟ್ಟು ಪಕ್ಷಪಾತಿಗಳಾಗಿದ್ದಾರೆ. ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಗೆ ಬಂದಾಗ ಇಂತಹ ಅಧಿಕಾರಿಗಳನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಬಾರದು’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
‘ಪಕ್ಷಪಾತಿ ಪೊಲೀಸ್ ಸಿಬ್ಬಂದಿ, ಅಧಿಕಾರಿಗಳನ್ನು ಚುನಾವಣಾ ಕರ್ತವ್ಯದಿಂದ ತೆಗೆದುಹಾಕುವಂತೆ ಕೋರಿ ನಾನು ಸಿಇಸಿಗೆ ಪತ್ರ ಕಳುಹಿಸಿದ್ದೇನೆ’ ಎಂದರು.
ಪೊಲೀಸರು ಯಾವುದೇ ರಾಜಕೀಯ ಹೇಳಿಕೆಗಳನ್ನು ನೀಡುವಂತಿಲ್ಲ ಎಂದು ಪ್ರತಿಪಾದಿಸಿದ ಸುವೇಂದು, ಮಮತಾ ಅವರ ಆಡಳಿತದಲ್ಲಿ ಪೊಲೀಸರು ರಾಜ್ಯದಲ್ಲಿ ಪ್ರಜಾಪ್ರಭುತ್ವದ ಕಟ್ಟಕಡೆಯ ಕುರುಹುಗಳನ್ನೂ ನಾಶ ಮಾಡಿದ್ದಾರೆ ಎಂದು ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.