
ಕೋಲ್ಕತ್ತ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದ ಜಿಲ್ಲೆಯ ಗೋದಾಮುಗಳಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ ₹10 ಲಕ್ಷ ಪರಿಹಾರ ಘೋಷಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋದಾಮಿನ ಮಾಲೀಕ ಗಂಗಾಧರ್ ದಾಸ್‌ನನ್ನು ಪೊಲೀಸರು ಬಂಧಿಸಿದ್ದು, ಇಂದು (ಬುಧವಾರ) ಬರುಯಿಪುರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗೋದಾಮುಗಳಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 8 ಜನರು ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತದೇಹಗಳನ್ನು ಗುರುತಿಸಲಾಗದಷ್ಟು ಸುಟ್ಟು ಹೋದ ಕಾರಣ , ಡಿಎನ್‌ಎ ಪರೀಕ್ಷೆ ನಡೆಸಿ ಬಳಿಕ ಮೃತರ ಕುಟುಂಗಳಿಗೆ ಪರಿಹಾರ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಫಿರ್ಹಾದ್ ಹಕೀಮ್ ಹೇಳಿದ್ದಾರೆ.
ಡಿಎನ್‌ಎ ಪರೀಕ್ಷೆ ನಡೆಸಲು ಬುಧವಾರ ನ್ಯಾಯಾಲಯದಿಂದ ಅನುಮತಿ ಪಡೆಯಲಾಗುವುದು. ತನಿಖೆ ಮುಂದುವರಿದಿದ್ದು, ಎಲ್ಲಾ ಆಯಾಮಗಳಿಂದ ತನಿಖೆ ನಡೆಸಲಾಗುವುದು ಎಂದು ಫಿರ್ಹಾದ್ ತಿಳಿಸಿದ್ದಾರೆ.
ಬೆಂಕಿ ಅವಘಡ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿದ್ದ ಹಕೀಮ್, ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.