
ಕೋಲ್ಕತ್ತ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ವಿಚಾರಣೆಗೆ ಹಾಜರಾಗುವಂತೆ ಟೀಂ ಇಂಡಿಯಾ ಆಟಗಾರ ಮೊಹಮ್ಮದ್ ಶಮಿ ಅವರಿಗೆ ಸೂಚಿಸಲಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸೋಮವಾರ ಜಾದವ್‌ಪುರದಲ್ಲಿ ವಿಚಾರಣೆಗೆ ಹಾಜರಾಗುವಂತೆ ಶಮಿ ಮತ್ತು ಅವರ ಸಹೋದರ ಮೊಹಮ್ಮದ್ ಕೈಫ್ ಅವರಿಗೆ ಸೂಚಿಸಲಾಗಿತ್ತು. ಆದರೆ, ಶಮಿ ಅವರು ರಾಜ್‌ಕೋಟ್‌ನಲ್ಲಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಬಂಗಾಳ ತಂಡವನ್ನು ಪ್ರತಿನಿಧಿಸುತ್ತಿರುವುದರಿಂದ ವಿಚಾರಣೆಗೆ ಹಾಜರಾಗಿರಲಿಲ್ಲ.
‘ಬೇರೆ ದಿನದಂದು ವಿಚಾರಣೆಗೆ ಹಾಜರಾಗುವುದಾಗಿ ಚುನಾವಣಾ ಆಯೋಗಕ್ಕೆ ಶಮಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜನವರಿ 9ರಿಂದ 11ರೊಳಗೆ ವಿಚಾರಣೆಗೆ ಹಾಜರಾಗುವಂತೆ ದಿನಾಂಕ ಮರು ನಿಗದಿ ಮಾಡಲಾಗಿದೆ’ ಎಂದು ಅಧಿಕಾರಿ ವಿವರಿಸಿದ್ದಾರೆ.
ಉತ್ತರ ಪ್ರದೇಶ ಮೂಲದ ಶಮಿ ಅವರು ಕ್ರಿಕೆಟ್ ವೃತ್ತಿಜೀವನದ ಕಾರಣದಿಂದಾಗಿ ಹಲವು ವರ್ಷಗಳಿಂದ ಕೋಲ್ಕತ್ತದಲ್ಲಿ ವಾಸಿಸುತ್ತಿದ್ದು, ಕೋಲ್ಕತ್ತ ಮಹಾನಗರ ಪಾಲಿಕೆಯ ವಾರ್ಡ್ 93ರ ಮತದಾರರಾಗಿದ್ದಾರೆ.
‘ಗಣತಿ ನಮೂನೆಯನ್ನು ಶಮಿ ಮತ್ತು ಅವರ ಸಹೋದರ ತಪ್ಪಾಗಿ ಭರ್ತಿ ಮಾಡಿದ್ದಾರೆ. ಅದಕ್ಕಾಗಿಯೇ ಅವರನ್ನು ವಿಚಾರಣೆಗೆ ಕರೆಯಲಾಗಿದೆ’ ಎಂದೂ ಅವರು ತಿಳಿಸಿದ್ದಾರೆ.
ಚುನಾವಣಾ ಆಯೋಗವು ಪಶ್ಚಿಮ ಬಂಗಾಳದ ಮತದಾರರ ಕರಡು ಪಟ್ಟಿಯನ್ನು 2025ರ ಡಿ.16ರಂದು ಪ್ರಕಟಿಸಿತ್ತು. 58 ಲಕ್ಷ ಮತದಾರರ ಹೆಸರನ್ನು ಪಟ್ಟಿಯಿಂದ ಅಳಿಸಿಹಾಕಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.