
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮಂಗಳವಾರ ಹೆಚ್ಚಿನ ತಾಪಮಾನ ದಾಖಲಾಗಿದೆ. ರಾಜ್ಯದ ಹಲವು ಸ್ಥಳಗಳಲ್ಲಿ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚು ತಾಪಮಾನವಿದ್ದು, ಬಿಸಿಗಾಳಿ ವಾತವಾರಣ ಉಂಟಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ತೀವ್ರವಾದ ಬಿಸಿ ಗಾಳಿ ಇರಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಬಂಕುರಾದಲ್ಲಿ ದಿನದ ಅತ್ಯಧಿಕ ತಾಪಮಾನ 44.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಪನಾಗರ್ಹ್ ವಾಯುಪಡೆ ನಿಲ್ದಾಣದಲ್ಲಿ 43.4 ಡಿಗ್ರಿಗೆ ಏರಿಕೆಯಾಗಿದೆ ಎಂದು ವರದಿಯಾಗಿದೆ.
ಕೋಲ್ಕತ್ತಾದಲ್ಲಿ ಗರಿಷ್ಠ ತಾಪಮಾನ 38.6 ಡಿಗ್ರಿ ಸೆಲ್ಸಿಯಸ್ ಮತ್ತು ಸಾಲ್ಟ್ ಲೇಕ್‌ನಲ್ಲಿ 39 ಡಿಗ್ರಿ ದಾಖಲಾಗಿದೆ. ಇಲ್ಲಿನ ಪ್ರದೇಶಗಳಲ್ಲಿ ಬಿಸಿ ಮತ್ತು ಆರ್ದ್ರ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.
ರಾಜ್ಯದಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ ಕೈಗೊಳ್ಳಲು ಬಂಗಾಳ ಸರ್ಕಾರ ಮಂಗಳವಾರ ಜಿಲ್ಲೆಗಳ ಎಲ್ಲಾ ಹಿರಿಯ ಅಧಿಕಾರಿಗಳಿಗೆ ಸೂಚಿಸಿದೆ.
ಉನ್ನತ ಮಟ್ಟದ ಸಭೆ ನಡೆಸಿದ ಮುಖ್ಯ ಕಾರ್ಯದರ್ಶಿ ಎಚ್.ಕೆ ದ್ವಿವೇದಿ, ರಾಜ್ಯದಲ್ಲಿ ಪಂಚಾಯಿತಿ ಚುನಾವಣೆಗೂ ಮುನ್ನ ಪ್ರತಿ ಮನೆಗೂ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವಂತೆ ಸಾರ್ವಜನಿಕ ಆರೋಗ್ಯ ಇಲಾಖೆಗೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.