ಮಮತಾ ಬ್ಯಾನರ್ಜಿ
ಕೃಪೆ: ಪಿಟಿಐ
ಕೋಲ್ಕತ್ತ: ಪಶ್ಚಿಮ ಬಂಗಾಳದ ಪಶ್ಚಿಮ ಬರ್ದ್‌ಮಾನ್ ಜಿಲ್ಲೆಯ ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಕ್ರಿಯಿಸಿದ್ದು ‘ಆಘಾತಕಾರಿ‘ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಉತ್ತರ ಬಂಗಾಳದ ಪ್ರವಾಹ ಪೀಡಿತ ಪ್ರದೇಶಗಳಿಗೆ ಮಮತಾ ಭೇಟಿ ನೀಡಿ ಪರಿಹಾರ ಕಾರ್ಯ ಮೇಲ್ವಿಚಾರಣೆ ನಡೆಸಿದರು. ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಇಂತಹ ಘಟನೆಗಳನ್ನು ಸರ್ಕಾರ ಸಹಿಸುವುದಿಲ್ಲ ಎಲ್ಲಾ ಆರೋಪಿಗಳಿಗೆ ಶಿಕ್ಷೆ ವಿಧಿಸಲಾಗುವುದು ಎಂದಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮಕೈಗೊಂಡಿದ್ದಾರೆ ಎಂದು ಮಮತಾ ತಿಳಿಸಿದ್ದಾರೆ.
ಶುಕ್ರವಾರ ರಾತ್ರಿ ಒಡಿಶಾದ ಜಲೇಶ್ವರ ಮೂಲದ ಎರಡನೇ ವರ್ಷದ ವೈದ್ಯ ವಿದ್ಯಾರ್ಥಿನಿಯನ್ನು ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಅರಣ್ಯ ಪ್ರದೇಶಕ್ಕೆ ಹೊತ್ತುಕೊಂಡು ಹೋಗಿ ಅತ್ಯಾಚಾರ ಎಸಲಾಗಿತ್ತು.
ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜು ಆವರಣದ ಹೊರಗಡೆ ಸ್ನೇಹಿತನೊಂದಿಗೆ ರಾತ್ರಿ ಊಟಕ್ಕೆ ತೆರಳಿದ್ದ ವೇಳೆ ಈ ಘಟನೆ ಸಂಭವಿಸಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆಯ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.