ADVERTISEMENT

ಎಸ್‌ಐಆರ್‌ನಿಂದ ಸಂಕಷ್ಟ: ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಪಿಟಿಐ
Published 5 ಫೆಬ್ರುವರಿ 2026, 10:17 IST
Last Updated 5 ಫೆಬ್ರುವರಿ 2026, 10:17 IST
<div class="paragraphs"><p>ಪಶ್ಚಿಮ ಬಂಗಾಳ ವಿಧಾನಸಭೆ</p></div>

ಪಶ್ಚಿಮ ಬಂಗಾಳ ವಿಧಾನಸಭೆ

   

ಕೋಲ್ಕತ್ತ(ಪಶ್ಚಿಮ ಬಂಗಾಳ): ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ನಡೆಯುತ್ತಿರುವುದರಿಂದ ಜನರು ಎದುರಿಸುತ್ತಿರುವ ತೊಂದರೆಗಳ ಕುರಿತು ಪಶ್ಚಿಮ ಬಂಗಾಳ ಸರ್ಕಾರ ಗುರುವಾರ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದೆ.

ನಿಯಮ 169ರ ಅಡಿಯಲ್ಲಿ ನಿರ್ಣಯ ಮಂಡಿಸಿದ ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ಶೋವಂದೇಬ್ ಚಟ್ಟೋಪಾಧ್ಯಾಯ, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಮತದಾರರಿಗೆ ಕಿರುಕುಳ ನೀಡಲಾಗುತ್ತಿದ್ದು, ಈ ಪ್ರಕ್ರಿಯೆಯ ಬಗೆಗಿನ ಆತಂಕದಿಂದ 107 ಜನರು ಸಾವಿಗೀಡಾಗಿದ್ದಾರೆ ಎಂದು ಹೇಳಿದ್ದಾರೆ.

ADVERTISEMENT

ಚುನಾವಣಾ ಆಯೋಗವನ್ನು ಟೀಕಿಸಿದ ಅವರು, ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಅದು ಕಿರುಕುಳ ಆಯೋಗವಾಗಿ ಮಾರ್ಪಟ್ಟಿದೆ ಎಂದು ಪ್ರತಿಪಾದಿಸಿದರು.

ಆದರೂ, ಸ್ಪೀಕರ್ ಬಿಮನ್ ಬ್ಯಾನರ್ಜಿ ಅವರು ಪ್ರಸ್ತಾವನೆಯನ್ನು ತಿರಸ್ಕರಿಸಿದರು. ಈ ವಿಷಯವು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವುದರಿಂದ ವಿಧಾನಸಭೆಯು ಅದರ ಬಗ್ಗೆ ಚರ್ಚಿಸಲು ಸಾಧ್ಯವಿಲ್ಲ ಎಂದು ವಾದಿಸಿದರು.

ಸುಪ್ರೀಂ ಕೋರ್ಟ್‌ನಲ್ಲಿ ಖುದ್ದು ವಾದ ಮಂಡಿಸಿದ ಮಮತಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ವಿಚಾರದಲ್ಲಿ ರಾಜ್ಯವನ್ನೇ ಗುರಿ ಮಾಡಲಾಗುತ್ತಿದೆ. ಈ ಪ್ರಕ್ರಿಯೆ ಮೂಲಕ ರಾಜ್ಯದ ಜನರಿಗೆ ಅನ್ಯಾಯವಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಖುದ್ದು ವಾದ ಮಂಡಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ‘ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಕೂಡಲೇ ಮಧ್ಯ ಪ್ರವೇಶಿಸಬೇಕು’ ಎಂದು ಬುಧವಾರ ಒತ್ತಾಯಿಸಿದ್ದರು.

‘ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ವೇಳೆ ಅನುಸರಿಸಲಾಗುತ್ತಿರುವ ಮಾನದಂಡಗಳನ್ನು ನೆರೆ ರಾಜ್ಯ ಅಸ್ಸಾಂನಲ್ಲಿ ಯಾಕೆ ಅನ್ವಯಿಸಲಾಗುತ್ತಿಲ್ಲ’ ಎಂದು ಪ್ರಶ್ನಿಸಿದರು.

ಮಮತಾ ಬ್ಯಾನರ್ಜಿ ಅವರ ಮೇಲ್ಮನವಿ ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ನೇತೃತ್ವದ ಪೀಠವು, ಫೆಬ್ರುವರಿ 9ರ ಒಳಗಾಗಿ ಪ್ರತಿಕ್ರಿಯೆ ಸಲ್ಲಿಸುವಂತೆ ಚುನಾವಣಾ ಆಯೋಗ ಹಾಗೂ ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಆಧಿಕಾರಿಗೆ ನೋಟಿಸ್‌ ಜಾರಿ ಮಾಡಿದೆ.

ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯ ಬಾಗ್ಚಿ ಹಾಗೂ ವಿಪುಲ್ ಎಂ.ಪಂಚೋಲಿ ಕೂಡ ಈ ಪೀಠದಲ್ಲಿದ್ದಾರೆ. ಅಪರೂಪವೆಂಬಂತೆ ಹಾಗೂ ಇದೇ ಮೊದಲ ಬಾರಿಗೆ ಹಾಲಿ ಮುಖ್ಯಮಂತ್ರಿಯೊಬ್ಬರು ಖುದ್ದು ಹಾಜರಾಗಿ ವಾದ ಮಂಡನೆ ಮಾಡಿರುವುದಕ್ಕೆ ಸುಪ್ರೀಂ ಕೋರ್ಟ್‌ ಸಾಕ್ಷಿಯಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.