ಸುಪ್ರೀಂ ಕೋರ್ಟ್
ನವದೆಹಲಿ: ಕೋಟಾ ನಗರದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚು ವರದಿಯಾಗುತ್ತಿರುವ ವಿಚಾರವಾಗಿ ರಾಜಸ್ಥಾನ ಸರ್ಕಾರವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತರಾಟೆಗೆ ತೆಗೆದುಕೊಂಡಿತು.
ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಮತ್ತು ಆರ್.ಮಹದೇವನ್ ಅವರನ್ನು ಒಳಗೊಂಡ ನ್ಯಾಯಪೀಠವು, ‘ಈ ವರ್ಷ ನಗರದಲ್ಲಿ 14 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ವರದಿಯಾಗಿದೆ. ಪರಿಸ್ಥಿತಿ ಗಂಭೀರವಾಗಿದೆ’ ಎಂದು ಕೋರ್ಟ್ ಕಳವಳ ವ್ಯಕ್ತಪಡಿಸಿತು.
‘ಸರ್ಕಾರ ಏನು ಮಾಡುತ್ತಿದೆ? ಕೋಟಾದಲ್ಲಿ ಮಾತ್ರ ವಿದ್ಯಾರ್ಥಿಗಳು ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ಸರ್ಕಾರದ ಪರ ವಕೀಲರನ್ನು ಪಾರ್ದೀವಾಲಾ ಪ್ರಶ್ನಿಸಿದರು.
ಆತ್ಮಹತ್ಯೆ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ವಕೀಲರು ತಿಳಿಸಿದರು.
ಮೇ 4ರಂದು 22 ವರ್ಷದ ವಿದ್ಯಾರ್ಥಿ ಐಐಟಿ ಖರಗಪುರದ ಹಾಸ್ಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ದಿನ ತಡವಾಗಿ ಎಫ್‌ಐಆರ್ ದಾಖಲಿಸಿದ್ದು ಏಕೆ ಎಂದು ನ್ಯಾಯಪೀಠ ಪ್ರಶ್ನಿಸಿತು.
‘ಇಂಥ ವಿಚಾರವನ್ನು ಹಗುರವಾಗಿ ಪರಿಗಣಿಸಬೇಡಿ. ಇದು ಅತ್ಯಂತ ಗಂಭೀರ ವಿಷಯ’ ಎಂದು ಒತ್ತಿ ಹೇಳಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.