ಕೇರಳ ಪಿಣರಾಯಿ ವಿಜಯನ್
ಕೃಪೆ: ಪಿಟಿಐ
ತಿರುವನಂತಪುರ: ‘ಕೇಂದ್ರದ ವನ್ಯಜೀವಿ ಸಂರಕ್ಷಣಾ ಕಾಯ್ದೆ–1972ಕ್ಕೆ ತಿದ್ದುಪಡಿ ತರುವ ಮಸೂದೆಯನ್ನು ಅಂಗೀಕರಿಸಿದ ಮೊದಲ ರಾಜ್ಯ ಕೇರಳ’ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ-ವನ್ಯಮೃಗ ಸಂಘರ್ಷವನ್ನು ಕಡಿಮೆ ಮಾಡುವ ಉದ್ದೇಶವನ್ನು ಹೊಂದಿರುವ ‘ಕೇರಳ ವನ್ಯಜೀವಿ ಸಂರಕ್ಷಣಾ ತಿದ್ದುಪಡಿ ಮಸೂದೆ’ಯನ್ನು ಕೇರಳ ವಿಧಾನಸಭೆಯು ಬುಧವಾರ ಅಂಗೀಕರಿಸಿದೆ.
‘ಈ ಮಸೂದೆಯು ಹೆಚ್ಚುತ್ತಿರುವ ಮಾನವ-ಪ್ರಾಣಿ ಸಂಘರ್ಷಕ್ಕೆ ಪರಿಹಾರ ಕಂಡುಕೊಳ್ಳುವ ಮತ್ತು ಅರಣ್ಯದ ಅಂಚಿನಲ್ಲಿ ವಾಸಿಸುತ್ತಿರುವ ಜನರಿಗೆ ನ್ಯಾಯವನ್ನು ಖಾತರಿಪಡಿಸುವ ನಿಟ್ಟಿನಲ್ಲಿ ಇಟ್ಟಂತಹ ಪ್ರಮುಖ ಹೆಜ್ಜೆಯಾಗಿದೆ’ ಎಂದು ಮುಖ್ಯಮಂತ್ರಿ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
‘ಈ ತಿದ್ದುಪಡಿಯು ಮಾನವ ಜೀವ ಮತ್ತು ವನ್ಯಜೀವಿ ಎರಡನ್ನೂ ಸಂರಕ್ಷಿಸಲು ಕೇರಳ ಸರ್ಕಾರ ಹೊಂದಿರುವ ಬದ್ಧತೆಯನ್ನು ಪುನರುಚ್ಚರಿಸುತ್ತದೆ. ಜನರು ಮತ್ತು ಪ್ರಕೃತಿಯ ನಡುವೆ ಸಾಮರಸ್ಯವನ್ನು ಬೆಳೆಸುತ್ತದೆ’ ಎಂದು ತಿಳಿಸಿದ್ದಾರೆ.
‘ವನ್ಯಜೀವಿ ಸಂರಕ್ಷಣಾ ಕಾಯ್ದೆ–1972ಕ್ಕೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಹಲವು ಸಲ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗದ ಕಾರಣ ಕಾಯ್ದೆಗೆ ನಮ್ಮದೇ ಆದ ತಿದ್ದುಪಡಿ ತರಲು ಮುಂದಾಗಿದ್ದೇವೆ’ ಎಂದು ಕೇರಳದ ಅರಣ್ಯ ಸಚಿವ ಎ.ಕೆ.ಶಶೀಂದ್ರನ್ ವಿಧಾನಸಭೆಗೆ ತಿಳಿಸಿದ್ದರು.
‘ಮಸೂದೆಯನ್ನು ರಾಜ್ಯಪಾಲರಿಗೆ ಕಳುಹಿಸಲಾಗುವುದು. ಇದು ಕೇಂದ್ರದ ಕಾಯ್ದೆ ಆಗಿರುವುದರಿಂದ ರಾಜ್ಯಪಾಲರು ಅದನ್ನು ರಾಷ್ಟ್ರಪತಿಗೆ ಕಳುಹಿಸುವರು’ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.