ADVERTISEMENT

ನಂದಿಗ್ರಾಮದಲ್ಲಿ ಮಮತಾ ವಿರುದ್ಧ 50 ಸಾವಿರ ಮತಗಳ ಅಂತರದ ಗೆಲುವು: ಬಿಜೆಪಿ

ಏಜೆನ್ಸೀಸ್
Published 5 ಮಾರ್ಚ್ 2021, 1:18 IST
Last Updated 5 ಮಾರ್ಚ್ 2021, 1:18 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೋಲ್ಕತ್ತ: ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆಯ ಬಳಿಕ ಪಶ್ಚಿಮ ಬಂಗಾಳದ ವರಿಷ್ಠರು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ 50,000 ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದೇವೆ ಎಂಬ ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ನಂದಿಗ್ರಾಮದಿಂದ ಯಾವ ಅಭ್ಯರ್ಥಿಯು ಕಣಕ್ಕಿಳಿದರೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು 50,000 ಮತಗಳಿಂದ ಸೋಲಿಸಲಿದ್ದೇವೆ ಎಂದು ಬಿಜೆಪಿ ಹಿರಿಯ ಮುಖಂಡರು ಹೇಳಿಕೆ ನೀಡಿದರು.

ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಪಕ್ಷದ ಅಭ್ಯರ್ಥಿಗಳ ಹೆಸರುಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಸ್ಪಷ್ಟಪಡಿಸಿದರು.

ADVERTISEMENT

ಮೊದಲೆರಡು ಹಂತಗಳ ಚುನಾವಣೆಗಾಗಿ ಸೀಟು ಹಂಚಿಕೆ ಬಗ್ಗೆ ಚರ್ಚಿಸಲಾಗಿದೆ. ವರಿಷ್ಠರ ಅಂತಿಮ ನಿರ್ಧಾರದ ಬಳಿಕ ಅಭ್ಯರ್ಥಿಗಳ ಹೆಸರುಗಳನ್ನು ಬಿಡುಗಡೆಗೊಳಿಸಲಾಗುವುದು ಎಂದು ವಿವರಿಸಿದರು.

ಮಮತಾ ಯಾವ ಕ್ಷೇತ್ರದಿಂದಲೂ ಸ್ಪರ್ಧಿಸಿದರೂ ನಮ್ಮ ಅಭ್ಯರ್ಥಿಗಳು ಕಠಿಣ ಸ್ಪರ್ಧೆಯನ್ನು ನೀಡಲಿದ್ದಾರೆ. ಟಿಎಂಸಿ ಕಾರ್ಯಕರ್ತರು ಈಗಲೂ ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. 200 ಸೀಟುಗಳ ಗುರಿಯೊಂದಿಗೆ ನಾವು ಮುನ್ನಡೆಯುತ್ತಿದ್ದೇವೆ. ಅದನ್ನು ಸಾಧಿಸಲಿದ್ದೇವೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ಅದೇ ಹೊತ್ತಿಗೆ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿರುವ ಸುವೇಂದು ಅಧಿಕಾರಿ ಸ್ಪರ್ಧಿಸುವ ಸೂಚನೆಯನ್ನು ಬಿಜೆಪಿ ವರಿಷ್ಠರು ನೀಡಿದ್ದಾರೆ.

ಪಕ್ಷದ ಕಾರ್ಯಕರ್ತರು ಸುವೇಂದು ಅಧಿಕಾರಿ ನಂದಿಗ್ರಾಮದಿಂದ ಸ್ಪರ್ಧಿಸಲು ಬಯಸುತ್ತಿದ್ದಾರೆ. ಆದರೆ ಈ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ ಎಂದು ಬಿಜೆಪಿ ಮುಖಂಡ ಮುಕುಲ್ ರಾಯ್ ಹೇಳಿದರು.

ಪಶ್ಚಿಮ ಬಂಗಾಳದಲ್ಲಿ ಮಾರ್ಚ್ 27ರಿಂದ ಏಪ್ರಿಲ್ 29ರ ವರೆಗೆ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೇ 2ರಂದು ಮತ ಎಣಿಕೆಯಲ್ಲಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.