ADVERTISEMENT

ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಯೆಚೂರಿ ಭಾಗವಹಿಸುವುದಿಲ್ಲ: ಸಿಪಿಐಎಂ

ಪಿಟಿಐ
Published 26 ಡಿಸೆಂಬರ್ 2023, 11:20 IST
Last Updated 26 ಡಿಸೆಂಬರ್ 2023, 11:20 IST
   

ನವದೆಹಲಿ: ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ರಾಮ ಪ್ರಾಣ ಪ್ರತಿಷ್ಠಾಪ‍ನೆ ಕಾರ್ಯಕ್ರಮದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಮ್‌ ಯೆಚೂರಿ ಅವರು ಭಾಗವಹಿಸುವುದಿಲ್ಲ ಎಂದು ಸಿಪಿಐ(ಎಂ) ತಿಳಿಸಿದೆ.

ಈ ಬಗ್ಗೆ ಪಕ್ಷದ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿರುವ ಸಿಪಿಐ(ಎಂ), ಧರ್ಮವು ವ್ಯಕ್ತಿಯೊಬ್ಬನ ವೈಯಕ್ತಿಕ ಆಯ್ಕೆ ಎಂದು ನಮ್ಮ ಪಕ್ಷ ನಂಬುತ್ತದೆ ಎಂದು ತಿಳಿಸಿದೆ.

‘ಧಾರ್ಮಿಕ ನಂಬಿಕೆಗಳನ್ನು ಗೌರವಿಸುವುದು ಮತ್ತು ಪ್ರತಿಯೊಬ್ಬ ವ್ಯಕ್ತಿ ಅನುಸರಿಸುವ ನಂಬಿಕೆಯ ಹಕ್ಕನ್ನು ಕಾಪಾಡುವುದು ನಮ್ಮ ಪಕ್ಷದ ಸಿದ್ಧಾಂತವಾಗಿದೆ. ಧರ್ಮವು ವೈಯಕ್ತಿಕ ಆಯ್ಕೆಯಾಗಿದ್ದು, ರಾಜಕೀಯ ಲಾಭಕ್ಕಾಗಿ ಅದನ್ನು ಬಳಸಬಾರದು. ಕಾರ್ಯಕ್ರಮಕ್ಕೆ ಆಹ್ವಾನವಿದ್ದು, ಕಾಮ್ರೆಡ್‌ ಸೀತಾರಾಮ್‌ ಯೆಚೂರಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ’ ಎಂದು ತಿಳಿಸಿದೆ.

ADVERTISEMENT

‘ಬಿಜೆಪಿ ಮತ್ತು ಆರ್‌ಎಸ್ಎಸ್‌ ಸೇರಿ ಧಾರ್ಮಿಕ ಸಮಾರಂಭವೊಂದನ್ನು ರಾಜ್ಯ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮವಾಗಿ ಮಾರ್ಪಡಿಸಿರುವುದು ನಿಜಕ್ಕೂ ದುರದೃಷ್ಟಕರ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಸೇರಿ ಸರ್ಕಾರದ ಇತರ ಅಧಿಕಾರಿಗಳು ಒಳಗೊಂಡಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದೆ.

‘ದೇಶದ ಆಡಳಿತದ ಮೂಲಭೂತ ತತ್ವವೆಂದರೆ ಸಂವಿಧಾನದ ಅಡಿಯಲ್ಲಿ ಸರ್ಕಾರಗಳು ಯಾವುದೇ ಧಾರ್ಮಿಕ ಸಂಬಂಧವನ್ನು ಹೊಂದಿರಬಾರದು. ಇದನ್ನು ಸುಪ್ರೀಂ ಕೋರ್ಟ್ ಕೂಡ ಪುನರುಚ್ಚರಿಸಿತ್ತು. ಆದರೆ, ಈಗಿನ ಸರ್ಕಾರ ಇಂತಹ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಈ ನಿಯಮವನ್ನು ಉಲ್ಲಂಘಿಸಿದೆ’ ಎಂದು ವಿಷಾದ ವ್ಯಕ್ತಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.