ADVERTISEMENT

ಕುದುರೆಗಳ ಓಟಕ್ಕೆ ಕತ್ತೆ ತಂದಿದ್ದೀರಿ: ರಾಹುಲ್ ಕುರಿತಂತೆ ಹರ್ದೀಪ್ ಲೇವಡಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಮಾರ್ಚ್ 2023, 12:19 IST
Last Updated 27 ಮಾರ್ಚ್ 2023, 12:19 IST
   

ನವದೆಹಲಿ: ಕುದುರೆಗಳ ಓಟಕ್ಕೆ ಕತ್ತೆ ತಂದಿದ್ದೀರಿ ಎಂದು ಕೇಂದ್ರದ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ, ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನಾನು ಸಾವರ್ಕರ್ ಅಲ್ಲ, ಗಾಂಧಿ, ಗಾಂಧಿ ಕ್ಷಮೆ ಕೇಳುವುದಿಲ್ಲ ಎಂಬ ರಾಹುಲ್ ಹೇಳಿಕೆ ಬೆನ್ನಲ್ಲೇ ಕೇಂದ್ರ ಸಚಿವರು ಈ ಹೇಳಿಕೆ ನೀಡಿದ್ದಾರೆ.

‘ದೇಶಕ್ಕೆ ಸಾವರ್ಕರ್ ಅವರಂತಹ ನಾಯಕರ ಕೊಡುಗೆ ಏನೆಂಬುದು ಎಲ್ಲರಿಗೂ ತಿಳಿದಿದೆ. ಕುದುರೆಗಳ ಓಟಕ್ಕೆ ಕತ್ತೆ ತಂದಿದ್ದೀರಿ' ಎಂದು ರಾಹುಲ್ ಕುರಿತಂತೆ ಹರ್ದೀಪ್ ನೀಡಿರುವ ಹೇಳಿಕೆಯ ವಿಡಿಯೊವನ್ನು ಎಎನ್‌ಐ ಹಂಚಿಕೊಂಡಿದೆ.

ADVERTISEMENT

ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ವಿರೋಧ ಪಕ್ಷಗಳ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಅವರು, ಗಂಭೀರವಾದ ಆತ್ಮಾವಲೋಕನ ಮಾಡಿಕೊಳ್ಳಿ. ಯಾರು, ಏನೆಂಬುದನ್ನು ಜನ ನಿರ್ಧರಿಸುತ್ತಾರೆ ಎಂದು ಕಾಂಗ್ರೆಸ್ ನಾಯಕರನ್ನು ಉದ್ದೇಶಿಸಿ ಹೇಳಿದರು.

ಯಾವುದೇ ವ್ಯಕ್ತಿ ವಿದೇಶಕ್ಕೆ ಹೋದಾಗ ವಾಕ್ ಸ್ವಾತಂತ್ರ್ಯದ ಜೊತೆಗೆ ಜವಾಬ್ದಾರಿಯ ಪ್ರಜ್ಞೆಯೂ ಇರಬೇಕು. ನಮ್ಮದು ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವ. ಆದರೆ, ರಾಹುಲ್ ಗಾಂಧಿ ಬ್ರಿಟನ್‌ಗೆ ಹೋದಾಗ ಭಾರತದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಯುತ್ತಿದೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಈ ಬಗ್ಗೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ ಕೇಂದ್ರ ಸಚಿವರು, ಇಂದಿರಾ ಗಾಂಧಿ ಆಡಳಿತಾವಧಿಯಲ್ಲಿ ನಾಗರಿಕರ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಗಿತ್ತು ಎಂಬುದನ್ನು ಕಾಂಗ್ರೆಸ್ಸಿಗರಿಗೆ ನೆನಪಿಸಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಮೋದಿ ಉಪನಾಮ ವ್ಯಂಗ್ಯ ಮಾಡಿದ್ದ ಪ್ರಕರಣದಲ್ಲಿ ಗುಜರಾತ್‌ನ ಸೂರತ್ ನ್ಯಾಯಾಲಯ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಬಳಿಕ, ಅವರನ್ನು ಲೋಕಸಭಾ ಸದಸ್ಯತ್ವದಿಂದಲೂ ಅನರ್ಹಗೊಳಿಸಲಾಗಿದೆ. ಇದನ್ನು ಖಂಡಿಸಿ ದೇಶದಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.