ADVERTISEMENT

ಅಕ್ರಮ ಗಣಿ ಪ್ರದೇಶಗಳ ಮೇಲೆ ಸಚಿವರ ದಾಳಿ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2012, 19:30 IST
Last Updated 14 ಫೆಬ್ರುವರಿ 2012, 19:30 IST

ರಾಮನಗರ: ರಾಜಧಾನಿ ಬೆಂಗಳೂರಿಗೆ ಅನತಿ ದೂರದಲ್ಲಿಯೇ ಇರುವ ಕನಕಪುರ ತಾಲ್ಲೂಕಿನ ಅರಣ್ಯ ಪ್ರದೇಶದಲ್ಲಿ ಅವ್ಯಾಹತವಾಗಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು ನಿತ್ಯವೂ ಕೋಟ್ಯಂತರ ರೂಪಾಯಿ ಮೌಲ್ಯದ ನಿಸರ್ಗ ಸಂಪತ್ತು ಲೂಟಿ ಮಾಡಲಾಗುತ್ತಿದೆ ಎಂದು ಅರಣ್ಯ ಸಚಿವ ಸಿ.ಪಿ.ಯೋಗೀಶ್ವರ್ ಆತಂಕ ವ್ಯಕ್ತಪಡಿಸಿದರು.

ಅವರು ಮಂಗಳವಾರ ಕನಕಪುರ ತಾಲ್ಲೂಕಿನ ಮರಳೆ, ಕೆಂಬಳ್ಳಿ ಹಾಗೂ ಹಲವೆಡೆ ನಡೆಯುತ್ತಿದ್ದ ಅಕ್ರಮ ಕಲ್ಲು ಗಣಿಗಾರಿಕೆ ತಾಣಗಳ ಮೇಲೆ ಇಲಾಖೆಯ ಅಧಿಕಾರಿಗಳೊಂದಿಗೆ ದಿಢೀರ್ ದಾಳಿ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಸುತ್ತಲೂ ಅರಣ್ಯ ಇರುವಾಗ ಮಧ್ಯಭಾಗದಲ್ಲಿ ಪಟ್ಟಾ ಭೂಮಿ ಬರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ಅವರು, ಅರಣ್ಯದ ಮಧ್ಯಭಾಗಗಳ ಪ್ರದೇಶಗಳನ್ನು ಪಟ್ಟಾ ಭೂಮಿ ಎಂದು ಸುಳ್ಳು ದಾಖಲೆ ಸೃಷ್ಟಿಸಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಅರಣ್ಯ ಇಲಾಖೆ, ಕಂದಾಯ ಇಲಾಖೆಯ ಸ್ಥಳೀಯ ಅಧಿಕಾರಿಗಳು ಪ್ರಭಾವಿ ವ್ಯಕ್ತಿಗಳ ಜೊತೆ ಕೈಜೋಡಿಸಿ ನಿಸರ್ಗ ಸಂಪತ್ತಿನ ಲೂಟಿಯಲ್ಲಿ ನಿರತರಾಗಿದ್ದಾರೆ ಎಂದು ಆಪಾದಿಸಿದ ಅವರು ಇಂತಹ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಕನಕಪುರ ತಾಲ್ಲೂಕಿನ ಭಾಗದ ಪ್ರದೇಶಗಳಲ್ಲಿ ಸುಮಾರು 15ರಿಂದ 20 ವರ್ಷಗಳಿಂದ ನಿರಂತರವಾಗಿ ಅಕ್ರಮ ಕಲ್ಲುಗಣಿಗಾರಿಕೆ ನಡೆಯುತ್ತಿದೆ. ಈ ಕುರಿತು ಶೀಘ್ರವೇ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗುವುದು ಎಂದು ಸಚಿವರು ತಿಳಿಸಿದರು.

ಕಲ್ಲು ಗಣಿಗಾರಿಕೆ ಸ್ಥಳಗಳಲ್ಲಿ ಸುತ್ತಾಡಿದ ಅವರು ತೀವ್ರ ಅಚ್ಚರಿ ವ್ಯಕ್ತಪಡಿಸಿ, ಬಳ್ಳಾರಿ ಜಿಲ್ಲೆಯಲ್ಲಿನ ಅಕ್ರಮ ಗಣಿಗಾರಿಕೆಗಿಂತಲೂ ಕನಕಪುರ ತಾಲ್ಲೂಕಿನಲ್ಲಿ ಭಾರಿ ಪ್ರಮಾಣದ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ಹೇಳಿದರು. ಅರಣ್ಯ, ಕಂದಾಯ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.