ಬೆಂಗಳೂರು: ರಾಜ್ಯದ ಹೆಚ್ಚಿನ ಪ್ರದೇಶಗಳು ಬರದ ಬೇಗೆಯಲ್ಲಿ ಬೇಯುತ್ತಿರುವ ಕಾರಣ ನಾಡಹಬ್ಬ ದಸರಾವನ್ನು ಅಕ್ಟೋಬರ್ 16ರಿಂದ 24ರವರೆಗೆ ಸರಳವಾಗಿ, ವಿಧಿವತ್ತಾಗಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿ ಜಗದೀಶ ಶೆಟ್ಟರ್ ನೇತೃತ್ವದಲ್ಲಿ ಗೃಹ ಕಚೇರಿ `ಕೃಷ್ಣಾ~ದಲ್ಲಿ ಗುರುವಾರ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
`ಸಾಂಪ್ರದಾಯಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಎಂದಿನಂತೆ ನಡೆಯಲಿವೆ. ದಸರಾ ಉದ್ಘಾಟನೆಗೆ ಯಾರನ್ನು ಆಹ್ವಾನಿಸಬೇಕು, ಸಾಂಸ್ಕೃತಿಕ ಕಾರ್ಯಕ್ರಮಗಳ ರೂಪುರೇಷೆ ಹೇಗಿರಬೇಕು, ಖರ್ಚು ಎಷ್ಟಾಗುತ್ತದೆ ಎಂಬ ಕುರಿತು ಇನ್ನೊಮ್ಮೆ ಸಭೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು~ ಎಂದು ಶೆಟ್ಟರ್ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.
ದಸರಾ ಸಿದ್ಧತೆಗೆ ಮೊದಲ ಹಂತದಲ್ಲಿ ರೂ 6 ಕೋಟಿ ಬಿಡುಗಡೆ ಮಾಡಲಾಗಿದೆ. ಸರಳವಾಗಿ ಆಚರಿಸುವ ನಿರ್ಧಾರ ಕೈಗೊಂಡಿದ್ದರೂ, ನಾಡಹಬ್ಬದ ಸಂಭ್ರಮಕ್ಕೆ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು. ಅನಗತ್ಯ ವೆಚ್ಚಗಳನ್ನು ನಿಯಂತ್ರಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ. ರಾಮದಾಸ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಗೋವಿಂದ ಕಾರಜೋಳ, ಪ್ರವಾಸೋದ್ಯಮ ಸಚಿವ ಆನಂದ ಸಿಂಗ್, ಸಂಬಂಧಪಟ್ಟ ಅಧಿಕಾರಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.