ADVERTISEMENT

ಆದಾಯಕ್ಕಿಂತ ಹೆಚ್ಚು ಆಸ್ತಿ: ಶಾಸಕರ ಜಾಮೀನು ಅರ್ಜಿ ಇತ್ಯರ್ಥ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2012, 19:30 IST
Last Updated 18 ಏಪ್ರಿಲ್ 2012, 19:30 IST

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಎದುರಿಸುತ್ತಿರುವ ಸಿರುಗುಪ್ಪ ಶಾಸಕ ಎಂ.ಎಸ್.ಸೋಮಲಿಂಗಪ್ಪ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ಬುಧವಾರ ಇತ್ಯರ್ಥಗೊಳಿಸಿದೆ.
 
ತನಿಖೆಯ ಅವಧಿಯಲ್ಲಿ ಶಾಸಕರ ಬಂಧನ ಸಾಧ್ಯತೆ ಇಲ್ಲ ಎಂದು ಲೋಕಾಯುಕ್ತ ಪೊಲೀಸರು ಪ್ರಮಾಣ ಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ಕ್ರಮ ಕೈಗೊಂಡಿದೆ.

ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದ ನಿವೃತ್ತ ಉಪನ್ಯಾಸಕ ಬಿ.ಈರಣ್ಣ ಅವರು ಸೋಮಲಿಂಗಪ್ಪ ಅಕ್ರಮ ಆಸ್ತಿ ಹೊಂದಿದ್ದಾರೆ ಎಂದು ಆರೋಪಿಸಿದ್ದರು. ಈ ಬಗ್ಗೆ ತನಿಖೆ ನಡೆಸುವಂತೆ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿತ್ತು. `ಪ್ರಥಮ ಮಾಹಿತಿ ವರದಿ~ (ಎಫ್‌ಐಆರ್) ದಾಖಲಿಸಿಕೊಂಡಿದ್ದ ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದ್ದರು.

ತನಿಖೆಯ ಅವಧಿಯಲ್ಲಿ ತಮ್ಮನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಆತಂಕಗೊಂಡ ಶಾಸಕರು, ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಶಾಸಕರ ಅರ್ಜಿಯ ವಿಚಾರಣೆ ವೇಳೆ ಬುಧವಾರ ಪ್ರಮಾಣಪತ್ರ ಸಲ್ಲಿಸಿದ ಲೋಕಾಯುಕ್ತ ಪೊಲೀಸರು, `ಸಾಕ್ಷ್ಯ ನಾಶ, ಸಾಕ್ಷಿಗಳಿಗೆ ಬೆದರಿಕೆ ಹಾಕವುದು ಮತ್ತಿತರ ಚಟುವಟಿಕೆಗಳ ಮೂಲಕ ತನಿಖೆಗೆ ಅಡ್ಡಿಪಡಿಸದೇ ಇದ್ದರೆ ತನಿಖೆ ಪೂರ್ಣಗೊಳ್ಳುವವರೆಗೂ ಸೋಮಲಿಂಗಪ್ಪ ಅವರನ್ನು ಬಂಧಿಸುವುದಿಲ್ಲ~ ಎಂದು ತಿಳಿಸಿದರು.

ತನಿಖಾಧಿಕಾರಿಯ ಹೇಳಿಕೆಯನ್ನು ಪರಿಗಣಿಸಿದ ನ್ಯಾಯಾಧೀಶ ಎನ್.ಕೆ.ಸುಧೀಂಧ್ರ ರಾವ್ ಅವರು, ಸೋಮಲಿಂಗಪ್ಪ ಅವರ ಅರ್ಜಿಯನ್ನು ಇತ್ಯರ್ಥಪಡಿಸಿದರು. ತನಿಖೆಗೆ ಅಡ್ಡಿಪಡಿಸದಂತೆಯೂ ಈ ಸಂದರ್ಭದಲ್ಲಿ ಶಾಸಕರಿಗೆ ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.