ADVERTISEMENT

ಇಂದು ರಾಜ್ಯಕ್ಕೆ ಅಖಿಲೇಶ್ ಯಾದವ್

​ಪ್ರಜಾವಾಣಿ ವಾರ್ತೆ
Published 12 ಜೂನ್ 2013, 19:59 IST
Last Updated 12 ಜೂನ್ 2013, 19:59 IST

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ಉತ್ತರಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ರಾಜ್ಯದಲ್ಲಿ ಎರಡು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಖಿಲೇಶ್ ಅವರು ಗುರುವಾರ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ಭೇಟಿ ನೀಡಲಿದ್ದು, ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುವ ಬಗ್ಗೆ ಪಕ್ಷದ ಪದಾಧಿಕಾರಿಗಳೊಂದಿಗೆ ಸಭೆ ನಡೆಸುವರು. ನಂತರ ವಿವಿಧ ಪಕ್ಷಗಳ ಮುಖಂಡರನ್ನು ಭೇಟಿ ಮಾಡುವರು ಎಂದರು. ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುವರು. ನಂತರ ನಗರದ ಕೈಗಾರಿಕೋದ್ಯಮಿಗಳು ಹಾಗೂ ಉದ್ಯಮಿಗಳೊಂದಿಗೆ ಚರ್ಚೆ ನಡೆಸುವರು.

ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಚನ್ನಪಟ್ಟಣದಲ್ಲಿ ನಡೆಯುವ ಬಹಿರಂಗ ಸಭೆಯಲ್ಲಿ ಭಾಗವಹಿಸುವರು. ನಂತರ ಪಕ್ಷದ ರಾಜ್ಯ ಘಟಕ ಆಯೋಜಿಸಿರುವ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಾರೆ.

ಅಲ್ಲಿಂದ ಮೈಸೂರಿನಲ್ಲಿರುವ ಸುತ್ತೂರು ಮಠಕ್ಕೆ ತೆರಳಿ, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆಯುವರು. ನಂತರ ತಾವು ವ್ಯಾಸಂಗ ಮಾಡಿದ ಎಂಜಿನಿಯರಿಂಗ್ ಕಾಲೇಜಿಗೆ ಭೇಟಿ ನೀಡಲಿದ್ದಾರೆ. ಇದಾದ ನಂತರ ಕಾಲೇಜಿನ ಹಳೇ ಸ್ನೇಹಿತರೊಂದಿಗೆ ಕೆಲ ಸಮಯ ಕಳೆದು, ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದರ್ಶನ ಮಾಡಿ ಉತ್ತರಪ್ರದೇಶಕ್ಕೆ ಹಿಂತಿರುಗಲಿದ್ದಾರೆ ಎಂದು ಅವರು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.