ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ:ಬೀದರ ಜಿಲ್ಲೆಯ ಶಿಕ್ಷಕ ಅಮಾನತು

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2013, 19:59 IST
Last Updated 1 ಏಪ್ರಿಲ್ 2013, 19:59 IST

ಬೆಂಗಳೂರು: ರಾಜ್ಯದಲ್ಲಿ ಸೋಮವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂದರ್ಭದಲ್ಲಿ ಕರ್ತವ್ಯ ಲೋಪ ಎಸಗಿದ ಕಾರಣಕ್ಕೆ ಬೀದರ ಜಿಲ್ಲೆ ಕಮಲನಗರ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ರವೀಂದ್ರ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.

ಎಂ.ಎ.ಆರ್.ಜಿ. ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ರವೀಂದ್ರಕುಮಾರ್ ಮೇಲ್ವಿಚಾರಕರಾಗಿದ್ದರು. ಈ ಕೇಂದ್ರದಲ್ಲಿ ಪರೀಕ್ಷೆ ಮುಗಿದ ನಂತರ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆಗಳನ್ನು ಸ್ವೀಕರಿಸುವಾಗ ಒಬ್ಬ ವಿದ್ಯಾರ್ಥಿಯ ಉತ್ತರ ಪತ್ರಿಕೆ ಕಾಣೆಯಾಗಿತ್ತು. ಆದರೆ, ಉತ್ತರ ಪತ್ರಿಕೆಯನ್ನು ಸ್ವೀಕರಿಸಿರುವ ಬಗ್ಗೆ ಸ್ವೀಕೃತಿ ಪತ್ರದಲ್ಲಿ ವಿದ್ಯಾರ್ಥಿಯ ಸಹಿ ಇತ್ತು.

ಈ ಕುರಿತು ಮೇಲ್ವಿಚಾರಕರನ್ನು ವಿಚಾರಿಸಿದಾಗ ವಿದ್ಯಾರ್ಥಿಯು ಉತ್ತರ ಪತ್ರಿಕೆಯನ್ನು ತನ್ನೊಂದಿಗೆ ತೆಗೆದುಕೊಂಡು ಹೋಗಿರುವ ಮಾಹಿತಿ ದೊರೆಯಿತು. ಈ ಕಾರಣಕ್ಕೆ ರವೀಂದ್ರ ಕುಮಾರ್‌ರನ್ನು ಅಮಾನತು ಮಾಡಲಾಗಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕ ಡಿ. ವೆಂಕಟೇಶಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೊದಲ ದಿನವಾದ ಸೋಮವಾರ ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ ಹಾಗೂ ಸಂಸ್ಕೃತ ವಿಷಯದ ಪರೀಕ್ಷೆ ನಡೆಯಿತು. ಪರೀಕ್ಷೆಯಲ್ಲಿ ನಕಲು ಮಾಡಿದ ಒಟ್ಟು 14 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ. ಕೋಲಾರ -10, ರಾಯಚೂರು - 2,  ವಿಜಾಪುರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ತಲಾ ಒಬ್ಬ ವಿದ್ಯಾರ್ಥಿಯನ್ನು  ಡಿಬಾರ್ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.