ADVERTISEMENT

ಕಾಂಗ್ರೆಸ್ ಪ್ರಚಾರಕ್ಕೆ ಸೋನಿಯಾ, ರಾಹುಲ್, ಸಿಂಗ್

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2013, 19:59 IST
Last Updated 20 ಏಪ್ರಿಲ್ 2013, 19:59 IST

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಬಿರುಸಿನ ಪ್ರಚಾರ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಿ ಡಾ.ಮನಮೋಹನ್ ಸಿಂಗ್ ಸೇರಿದಂತೆ ಕಾಂಗ್ರೆಸ್ಸಿನ ಘಟಾನುಘಟಿ ನಾಯಕರು ಪ್ರಚಾರ ಕಣಕ್ಕೆ ಧುಮುಕಲಿದ್ದಾರೆ.

ಇದೇ 23ರಿಂದ ಮೇ 2ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರಾಷ್ಟ್ರೀಯ ನಾಯಕರು ಪ್ರಚಾರ ನಡೆಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಸೇರಿದಂತೆ ರಾಜ್ಯಮಟ್ಟದ ನಾಯಕರು ಬೇರೆ ಬೇರೆ ತಂಡಗಳಲ್ಲಿ ಭಾನುವಾರದಿಂದಲೇ ಪ್ರಚಾರದಲ್ಲಿ ತೊಡಗಲಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವೀರಣ್ಣ ಮತ್ತಿಕಟ್ಟಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಾಂಗ್ರೆಸ್‌ನ ಎಲ್ಲ ಹಿರಿಯ ಧುರೀಣರು ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ. ಕೆಲವರು ಈಗಾಗಲೇ ಪ್ರಚಾರದಲ್ಲಿ ತೊಡಗಿದ್ದಾರೆ. ಕೃಷ್ಣ ಅವರು ಪ್ರಚಾರದಿಂದ ದೂರ ಉಳಿಯಲಿದ್ದಾರೆ ಎಂಬ ಗಾಳಿಸುದ್ದಿಯಲ್ಲಿ ಹುರುಳಿಲ್ಲ. ಭಾನುವಾರ ಬೆಂಗಳೂರಿನ ವಿಜಯನಗರ ಕ್ಷೇತ್ರದಿಂದ ಅವರು ಪ್ರಚಾರ ಆರಂಭಿಸಲಿದ್ದು, ಮೇ 3ರವರೆಗೂ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ದುರುದ್ದೇಶದ ಟೀಕೆ: ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಳು ಮಾರಾಟವಾಗಿವೆ ಎಂಬ ಆರೋಪ ನಿರಾಧಾರ. ವಿರೋಧ ಪಕ್ಷಗಳು ದುರುದ್ದೇಶದಿಂದ ಇಂತಹ ಹುಯಿಲು ಹಬ್ಬಿಸಿವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್ ಟೀಕಿಸಿದರು.

ಬಿಜೆಪಿ, ಜೆಡಿಎಸ್‌ನವರು ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಈ ರೀತಿಯ ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಆಪರೇಷನ್ ಕಮಲ, ಅಡ್ಡಮತದಾನ ಶುರುವಾಯಿತು. ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ ಎಂಬ ವಾದ ಸರಿಯಲ್ಲ. ಅಡ್ಡಮತದಾನ ಮಾಡಿದವರು ಯಾರು ಎಂಬುದು ಖಚಿತವಾಗಿಲ್ಲ. ವಿ.ಆರ್.ಸುದರ್ಶನ್ ನೇತೃತ್ವದ ಸಮಿತಿಯ ವರದಿಯಲ್ಲಿ ಯಾರ ಹೆಸರನ್ನೂ ಪ್ರಸ್ತಾಪಿಲ್ಲ ಎಂದರು.

ಕಾಂಗ್ರೆಸ್‌ನ ಯಾವ ಮುಖಂಡರೂ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿಲ್ಲ. ನಿಯಮ ಅನುಸಾರ ಹಲವಾರು ವರ್ಷಗಳಿಂದ ಗಣಿಗಾರಿಕೆ ನಡೆಸುತ್ತಿದ್ದಾರೆ. ಬಿಜೆಪಿಯವರ ಹಾಗೆ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.