ADVERTISEMENT

ಕಾಂಗ್ರೆಸ್ ವಿರುದ್ಧ ಹೋರಾಟ ತೀವ್ರಗೊಳಿಸಲು ಬಿಜೆಪಿ ತೀರ್ಮಾನ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2018, 19:29 IST
Last Updated 24 ಮಾರ್ಚ್ 2018, 19:29 IST

ಬೆಂಗಳೂರು: ಕಾಂಗ್ರೆಸ್ ನಾಯಕರ ಮೇಲಿನ ಭ್ರಷ್ಟಾಚಾರ ಆರೋಪಗಳು ಮತ್ತು ಚುನಾವಣೆ ಹೊತ್ತಿನಲ್ಲಿ ರಾಜ್ಯ ಸರ್ಕಾರ ಬೃಹತ್ ಯೋಜನೆಗಳನ್ನು ಘೋಷಿಸುತ್ತಿರುವುದರ ವಿರುದ್ಧ ಅಭಿಯಾನ ನಡೆಸಿ ಜನರಲ್ಲಿ ಅರಿವು ಮೂಡಿಸಲು ಬಿಜೆಪಿ ಪ್ರಮುಖರ ಸಭೆ ನಿರ್ಧರಿಸಿದೆ.

ಸರ್ಕಾರ ತರಾತುರಿಯಲ್ಲಿ ವಿವಿಧ ಕಾಮಗಾರಿಗಳಿಗೆ ಟೆಂಡರ್ ಕರೆಯುತ್ತಿದೆ. ಕೋಟ್ಯಂತರ ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನಡೆಸುತ್ತಿದೆ. ಅಪೂರ್ಣ ಕಾಮಗಾರಿಗಳನ್ನು ಉದ್ಘಾಟಿಸುವ ಮೂಲಕ ಜನರ ಕಣ್ಣಿಗೆ ಮಣ್ಣೆರಚುವ ಕಾರ್ಯದಲ್ಲಿ ಕಾಂಗ್ರೆಸ್ ತೊಡಗಿದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು ಎಂದು ಮೂಲಗಳು ತಿಳಿಸಿವೆ.

ಈ ನಡೆಯ ಮೂಲಕ ಕಾಂಗ್ರೆಸ್ ಜನರ ಅನುಕಂಪ ಗಿಟ್ಟಿಸುವ ಸಾಧ್ಯತೆ ಇದೆ. ಇವುಗಳ ಹಿಂದಿನ ವಾಸ್ತವ ಸ್ಥಿತಿಯನ್ನು ಬಯಲಿಗೆಳೆಯುವ ಕೆಲಸ ಮಾಡಬೇಕಿದೆ. ಈ ಯೋಜನೆಗಳಿಗೆ ಅಗತ್ಯವಿರುವ ಅನುದಾನವೆಷ್ಟು, ಎಲ್ಲಿಂದ ಮತ್ತು ಹೇಗೆ ಅದನ್ನು ಕ್ರೋಡೀಕರಿಸುತ್ತಾರೆ ಎಂಬುದನ್ನು ಪತ್ತೆ ಮಾಡಿ ಜನರಿಗೆ ತಿಳಿಸಬೇಕು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.

ADVERTISEMENT

ಅಮಿತ್ ಶಾ ರಾಜ್ಯ ಭೇಟಿಯ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ದ ಮತ್ತೊಂದು ಆರೋಪಪಟ್ಟಿ ಬಿಡುಗಡೆ ಮಾಡಬೇಕು. ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಬೈಕ್ ರ‍್ಯಾಲಿ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂಬ‌ ನಿರ್ಣಯ ತೆಗೆದುಕೊಳ್ಳಲಾಯಿತು ಎಂದೂ ಮೂಲಗಳು ತಿಳಿಸಿವೆ.

ಮತದಾರರ ಪಟ್ಟಿಯಲ್ಲಿ ನಕಲಿ ಮತದಾರರನ್ನು ಸೇರಿಸಲು ಕಾಂಗ್ರೆಸ್ ಯತ್ನಿಸುತ್ತಿರುವ ಬಗ್ಗೆ ನಿಗಾ ವಹಿಸುವಂತೆ ಕಾರ್ಯಕರ್ತರಿಗೆ ಸೂಚನೆ ನೀಡಲು  ಮತ್ತು ಟಿಕೆಟ್ ಆಕಾಂಕ್ಷಿಗಳ ಸಭೆಯನ್ನು ಏಪ್ರಿಲ್ ಮೊದಲ ವಾರದಲ್ಲಿ ನಡೆಸಲು ತೀರ್ಮಾನಿಸಲಾಯಿತು ಎಂದೂ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.