ADVERTISEMENT

ಕಾರ್ಖಾನೆ ಮಾಲಿನ್ಯ: ಕಟ್ಟುನಿಟ್ಟು ಕ್ರಮ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2012, 19:30 IST
Last Updated 20 ಅಕ್ಟೋಬರ್ 2012, 19:30 IST

ಬೆಂಗಳೂರು: ಅಪಾಯಕಾರಿ ತ್ಯಾಜ್ಯ ವಸ್ತುಗಳನ್ನು ಸರಿಯಾಗಿ ನಿರ್ವಹಿಸದೆ ವಿಷಯುಕ್ತ ಮಾಲಿನ್ಯ ಉಂಟು ಮಾಡುತ್ತಿರುವ ಕಾರ್ಖಾನೆಗಳು, ಕಂಪೆನಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚಿಸಲಾಗಿದೆ ಎಂದು ಪರಿಸರ ಸಚಿವ ಎಸ್.ಶಿವಣ್ಣ ಶನಿವಾರ ಇಲ್ಲಿ ತಿಳಿಸಿದರು.

ತ್ಯಾಜ್ಯ ವಸ್ತುಗಳನ್ನು ಸರಿಯಾಗಿ ನಿರ್ವಹಣೆ ಮಾಡದ ಕಾರ್ಖಾನೆಗಳ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರ ಮಂಡಳಿಯ ಅಧಿಕಾರಿಗಳಿಗೆ ಇದೆ. ಆದರೆ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಕಾಲ ಕಾಲಕ್ಕೆ ತಪಾಸಣೆ ನಡೆಸದ ಕಾರಣ ಈ ರೀತಿ ಆಗಿದೆ. ಇನ್ನು ಮುಂದೆ ಇದಕ್ಕೆ ಅವಕಾಶ ನೀಡುವುದಿಲ್ಲ. ನಿಯಮಾನುಸಾರ ಅಧಿಕಾರಿಗಳು ಕಾರ್ಖಾನೆ, ಕಂಪೆನಿಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಬೇಕು ಎಂದು ಸೂಚಿಸಲಾಗಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಆದೇಶಿಸಲಾಗಿದೆ. ಮಂಡಳಿಯ ಹಿಂದಿನ ಅಧ್ಯಕ್ಷ ಎ.ಎಸ್.ಸದಾಶಿವಯ್ಯ ಕರ್ತವ್ಯಲೋಪ ಎಸಗಿದ್ದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದರು.

ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ತಿಂಗಳ ಒಳಗೆ ಮಂಡಳಿಯ ಅಧ್ಯಕ್ಷರು ಕ್ರಮ ಕೈಗೊಳ್ಳದಿದ್ದರೆ, ಸರ್ಕಾರವೇ ಮಧ್ಯಪ್ರವೇಶಿಸಿ ಕ್ರಮ ಕೈಗೊಳ್ಳಲಿದೆ. ಅಧಿಕಾರಿಗಳ ಅಶಿಸ್ತು ಪ್ರವೃತ್ತಿಯನ್ನು ಸಹಿಸುವುದಿಲ್ಲ. ಮಂಡಳಿಯನ್ನು `ಸೂಪರ್‌ಸೀಡ್~ ಮಾಡುವ ಅಧಿಕಾರ ಸರ್ಕಾರಕ್ಕೆ ಇದೆ ಎಂಬುದನ್ನು ಮರೆಯಬಾರದು ಎಂದು ಎಚ್ಚರಿಕೆ ನೀಡಿದರು.

ಮಂಡಳಿಯ ಅಧಿಕಾರಿಗಳು ನಿಯಮಿತವಾಗಿ ಎಲ್ಲ ಕಾರ್ಖಾನೆಗಳ ತಪಾಸಣೆ ನಡೆಸಿ, ನ್ಯೂನತೆಗಳನ್ನು ಸರಿಪಡಿಸಿಕೊಳ್ಳುವಂತೆ ಸೂಚನೆ ನೀಡಿದ್ದರೆ ಕಾರ್ಖಾನೆಗಳು ಈ ಸ್ಥಿತಿಗೆ ಬರುತ್ತಿರಲಿಲ್ಲ ಎಂದ ಅವರು, ಇನ್ನು ಮುಂದೆ ಕೆಳ ಹಂತದ ಅಧಿಕಾರಿಗಳು ಕಾಲಕಾಲಕ್ಕೆ ತಪಾಸಣೆ ನಡೆಸಬೇಕು. ಅವರ ಕಾರ್ಯವೈಖರಿ ಕುರಿತು ಕೇಂದ್ರ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಸೂಚಿಸಿರುವುದಾಗಿ ಹೇಳಿದರು.

ತುಮಕೂರು ತಾಲ್ಲೂಕು ಹಿರೇಹಳ್ಳಿಯ ಸಿಪ್ಸಾ ಆರ್‌ಐಸಿ ಇಂಡಿಯಾ ಲಿಮಿಟೆಡ್, ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದ ಕಾಳೇಶ್ವರಿ ರಿಫೈನರಿ ಪ್ರೈವೇಟ್ ಲಿಮಿಟೆಡ್, ಹರಿಹರದ ಪಾಲಿಫೈಬರ್ಸ್‌ ಲಿಮಿಟೆಡ್, ನಂಜನಗೂಡು ಕೈಗಾರಿಕಾ ಪ್ರದೇಶದ ಯುನೈಟೆಡ್ ಬ್ರಿವರೀಸ್, ಗ್ರಾಮೆಕ್ಸ್ ಪೇಪರ್ ಅಂಡ್ ಬೋರ್ಡ್ ಲಿಮಿಟೆಡ್, ಎ.ಟಿ ಅಂಡ್ ಎಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಮುಧೋಳ ತಾಲ್ಲೂಕು ಸಮೀರವಾಡಿಯ ಗೋದಾವರಿ ಬಯೋ ರಿಫಾರ್ಮ್ಸ ಲಿಮಿಟೆಡ್, ದಾವಣಗೆರೆಯ ಪ್ರಾದೇಶಿಕ ಪ್ರಯೋಗಾಲಯಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಎಲ್ಲಿಯೂ ತ್ಯಾಜ್ಯಗಳ ನಿರ್ವಹಣೆ ಸಮರ್ಪಕವಾಗಿ ಆಗಿಲ್ಲ ಎಂದು ಅವರು ಹೇಳಿದರು.

ಹಿರೇಹಳ್ಳಿ ಗ್ರಾಮಸ್ಥರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳೊಂದಿಗೆ ಸಿಪ್ಸಾ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲಿಸಿದಾಗ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅನುಮತಿ ಇಲ್ಲದೆ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವುದು ಕಂಡು ಬಂತು ಎಂದರು.

ಕಾರ್ಖಾನೆಗೆ ಬಳಸಿದ ನೀರನ್ನು ಸಂಸ್ಕರಿಸದೆ ಅನಧಿಕೃತವಾಗಿ ನಿರ್ಮಿಸಿರುವ ಸಂಗ್ರಹಣಾ ಗುಂಡಿಯಲ್ಲಿ ಶೇಖರಿಸಲಾಗಿದೆ. ಇದರಿಂದ ಅಂತರ್ಜಲ ಮತ್ತು ಸುತ್ತಮುತ್ತಲ ಪರಿಸರ ಮಲಿನವಾಗಿದೆ. ಆದ್ದರಿಂದ ಸಂಸ್ಕರಣಾ ಘಟಕವನ್ನು ತುರ್ತಾಗಿ ಅಳವಡಿಸಿಕೊಳ್ಳಲು, ತ್ಯಾಜ್ಯ ವಸ್ತುಗಳನ್ನು ನಿಯಮಾನುಸಾರ ನಿರ್ವಹಣೆ ಮಾಡಲು ಸೂಚಿಸಲಾಗಿದೆ ಎಂದು ಹೇಳಿದರು.

ಪಾಲಿಫೈಬರ್ಸ್‌ ಕಾರ್ಖಾನೆ ಸಂಸ್ಕರಿಸಿದ ನೀರನ್ನು ತುಂಗಭದ್ರಾ ನದಿಗೆ ಬಿಡುತ್ತಿದೆ. ಆ ನೀರಿನಲ್ಲಿ ಬಣ್ಣದ ಅಂಶ ಹೆಚ್ಚಾಗಿರುವುದರಿಂದ ಇನ್ನೂ ಹೆಚ್ಚಿನ ಸಂಸ್ಕರಣೆಗೆ ಒಳಪಡಿಸಿ, ಬಣ್ಣದ ಅಂಶವನ್ನು ಕಡಿಮೆ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.

ಬೆಂಗಳೂರಿನ ಸೇಂಟ್ ಮಾರ್ಥಾಸ್ ಆಸ್ಪತ್ರೆ ಸಂಸ್ಕರಣಾ ಘಟಕವನ್ನು ಸ್ಥಾಪಿಸಿ, ಸಂಸ್ಕರಿಸಿದ ನೀರನ್ನು ಮರು ಬಳಕೆ ಮಾಡಿಕೊಳ್ಳುವ ಮೂಲಕ ವರ್ಷಕ್ಕೆ 50 ಲಕ್ಷ ರೂಪಾಯಿ ಉಳಿತಾಯ ಮಾಡುತ್ತಿದೆ. ಎಲ್ಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಸ್ಥಾಪನೆಗೆ ಮತ್ತು ಜೀವವೈದ್ಯಕೀಯ ತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿ ನಿರ್ವಹಣೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚಿಸಲಾಗಿದೆ ಎಂದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.