ADVERTISEMENT

ಕೃಷ್ಣಾ ಮೇಲ್ದಂಡೆ ಯೋಜನೆ: ಸರ್ವಾನುಮತದಿಂದಲೇ ಒಪ್ಪಿಗೆ- ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 4 ಜನವರಿ 2012, 19:30 IST
Last Updated 4 ಜನವರಿ 2012, 19:30 IST

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆಗೆ ಸಚಿವ ಸಂಪುಟದಲ್ಲಿ ಎಲ್ಲರ ಒಪ್ಪಿಗೆ ಪಡೆದೇ ಮಂಜೂರಾತಿ ಪಡೆಯಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಯೋಜನೆಗೆ ಅಗತ್ಯವಾದ ಕಾನೂನಾತ್ಮಕ ವಿಚಾರಗಳ ಬಗ್ಗೆ ಈಗಾಗಲೇ ತಜ್ಞರೊಂದಿಗೆ ಸಮಾಲೋಚಿಸಿದ್ದು, ಅದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಹೀಗಾಗಿ ವಿರೋಧದ ನಡುವೆ ಯೋಜನೆಗೆ ಸಂಪುಟದಲ್ಲಿ ಒಪ್ಪಿಗೆ ಪಡೆಯಲಾಯಿತು ಎಂಬ ಮಾಹಿತಿ ಸರಿಯಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಯೋಜನೆಗೆ ಅಗತ್ಯವಾಗಿರುವ ಹಣಕಾಸಿನ ವಿಚಾರವಾಗಿಯೂ ಚರ್ಚಿಸಲಾಗಿದೆ. ವಿಸ್ತೃತ ಯೋಜನಾ ವರದಿಯಲ್ಲಿ ಒಟ್ಟು 9 ಯೋಜನೆಗಳ ಬಗ್ಗೆ ಮಾಹಿತಿ ಇದೆ. ಹಣಕಾಸಿನ ಸಂಪನ್ಮೂಲಗಳನ್ನು ಹೇಗೆ ಹೊಂದಿಸಿಕೊಳ್ಳಬೇಕು ಎಂಬ ಬಗ್ಗೆಯೂ ಉಲ್ಲೇಖಿಸಲಾಗಿದೆ.
 
ಪುನರ್ವಸತಿ ಮತ್ತು ಪರಿಹಾರ ಕಾರ್ಯಕ್ರಮಗಳಿಗೆ ಆರ್ಥಿಕ ನೆರವು ಒದಗಿಸಲು `ಹುಡ್ಕೊ~ ಮತ್ತು `ನಬಾರ್ಡ್~ ಸಂಸ್ಥೆಗಳನ್ನು ಈಗಾಗಲೇ ಕೋರಲಾಗಿದೆ. ಅವುಗಳಿಂದ ಪೂರಕವಾದ ಸ್ಪಂದನೆ ಸಿಕ್ಕಿದೆ ಎಂದು ವಿವರಿಸಿದರು.

ರಾಷ್ಟ್ರೀಯ ಯೋಜನೆ ವ್ಯಾಪ್ತಿಗೆ ಇದು ಸೇರಿದರೆ ಕೇಂದ್ರ ಸರ್ಕಾರದಿಂದಲೂ ಇನ್ನಷ್ಟು ನೆರವು ಲಭ್ಯವಾಗಲಿದೆ. ರಾಜ್ಯ ಸರ್ಕಾರ ಪ್ರತಿ ಬಜೆಟ್‌ನಲ್ಲೂ ಸಾಧ್ಯವಾದಷ್ಟು ನೆರವು ಒದಗಿಸಲಿದೆ. ಯೋಜನೆ ಜಾರಿಗೆ ಸರ್ಕಾರ ಬದ್ಧವಾಗಿದೆ ಎಂದು ಬೊಮ್ಮಾಯಿ ಅವರು ಹೇಳಿದ್ದಾರೆ.


 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT