ADVERTISEMENT

ಕೆಎಂಎಫ್ ಅಧ್ಯಕ್ಷ ಮುಂದೆ ಯಾರು?

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2011, 19:30 IST
Last Updated 18 ಸೆಪ್ಟೆಂಬರ್ 2011, 19:30 IST

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ನೂತನ ಅಧ್ಯಕ್ಷರ ಆಯ್ಕೆ ಕುರಿತು ಸೋಮವಾರ ಸಂಜೆಯೊಳಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಹೇಳಿದರು.

ಮುಖ್ಯಮಂತ್ರಿಯವರ ಗೃಹ ಕಚೇರಿ `ಕೃಷ್ಣಾ~ದಲ್ಲಿ ಭಾನುವಾರ ತಡರಾತ್ರಿ ನಡೆದ ಸಭೆಯ ಬಳಿಕ ಅವರು ಈ ವಿಷಯ ತಿಳಿಸಿದರು. ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪಕ್ಷದ ಮುಖಂಡರಾದ ಸಂತೋಷ್ ಮತ್ತು ಎಂ.ಪಿ.ಕುಮಾರ್ ಅವರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ `ಸದ್ಭಾವನಾ ಉಪವಾಸ~ಕ್ಕೆ ಬೆಂಬಲ ಸೂಚಿಸಲು ಅಹಮದಾಬಾದ್‌ಗೆ ತೆರಳಿದ್ದ ಸದಾನಂದ ಗೌಡ ರಾತ್ರಿ ಬೆಂಗಳೂರಿಗೆ ಮರಳಿದರು.

ನಂತರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯೂ ಸೇರಿದಂತೆ ಹಲವು ವಿಷಯಗಳ ಬಗ್ಗೆ ಬಿಜೆಪಿ ಮುಖಂಡರು ಸಮಾಲೋಚನೆ ನಡೆಸಿದರು.

ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ಅಧ್ಯಕ್ಷರಾಗಿರುವ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರ ಅಧಿಕಾರದ ಅವಧಿ ಮಂಗಳವಾರ ಅಂತ್ಯಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಕೆಎಂಎಫ್‌ಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡುವ ಬಗ್ಗೆ ಸೋಮವಾರ ಸಂಜೆಯೊಳಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಕೊಪ್ಪಳ ಉಪ ಚುನಾವಣೆ ಕಾರ್ಯತಂತ್ರದ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಯಿತು ಎಂದು ಈಶ್ವರಪ್ಪ ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.