ADVERTISEMENT

ಕೆಪಿಎಸ್‌ಸಿ: ಇಬ್ಬರು ಆರೋಪಿಗಳ ಬಂಧನ

ಗೆಜೆಟೆಡ್ ಪ್ರೊಬೇಷನರಿ ಹುದ್ದೆ ನೇಮಕಾತಿ ಹಗರಣ

​ಪ್ರಜಾವಾಣಿ ವಾರ್ತೆ
Published 14 ಜುಲೈ 2013, 19:59 IST
Last Updated 14 ಜುಲೈ 2013, 19:59 IST

ಬೆಂಗಳೂರು: ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿನ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯನಿರ್ವಾಹಕ ಎಂಜಿನಿಯರ್ ಸೋಮನಾಥ್ ಮತ್ತು ಬೆಂಗಳೂರು ಜಲಮಂಡಳಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸುಧೀರ್ ಅವರನ್ನು ಸಿಐಡಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭವಾಗುತ್ತಿದ್ದಂತೆ ಇಬ್ಬರೂ ನಾಪತ್ತೆಯಾಗಿದ್ದರು. ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯ ಅಜ್ಞಾತ ಸ್ಥಳವೊಂದರಲ್ಲಿ ಒಟ್ಟಿಗೆ ತಲೆಮರೆಸಿಕೊಂಡಿದ್ದರು. ಆರೋಪಿಗಳು ಅಹ್ಮದ್‌ನಗರ ಜಿಲ್ಲೆಯಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿದ್ದ ಸಿಐಡಿ ಪೊಲೀಸರು ಎರಡು ದಿನಗಳ ಹಿಂದೆಯೇ ಅಲ್ಲಿಗೆ ತೆರಳಿದ್ದರು. ದೀರ್ಘಕಾಲ ಶೋಧ ನಡೆಸಿದ ಬಳಿಕ ಇಬ್ಬರನ್ನೂ ಬಂಧಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ದಿನವಿಡೀ ವಿಚಾರಣೆ: ಶನಿವಾರ ಬೆಳಿಗ್ಗೆ ಆರೋಪಿಗಳನ್ನು ಬಂಧಿಸಲಾಯಿತು. 900 ಕಿ.ಮೀ.ಗೂ ಹೆಚ್ಚು ದೂರವನ್ನು ಕ್ರಮಿಸಿದ ತನಿಖಾ ತಂಡ ಬೆಂಗಳೂರು ತಲುಪುವಾಗ ಮಧ್ಯರಾತ್ರಿ ಆಗಿತ್ತು. ರಾತ್ರಿಯೇ ಆರೋಪಿಗಳನ್ನು ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸಲಾಗಿತ್ತು. ಒಂದು ದಿನದ ಮಟ್ಟಿಗೆ ಆರೋಪಿಗಳನ್ನು ಪೊಲೀಸರ ವಶಕ್ಕೆ ನೀಡಿದ ನ್ಯಾಯಾಧೀಶರು, ಸೋಮವಾರ ಬೆಳಿಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಆದೇಶಿಸಿದ್ದಾರೆ.

ಆರೋಪಿಗಳನ್ನು ವಶದಲ್ಲಿ ಇರಿಸಿಕೊಂಡಿರುವ ತನಿಖಾ ತಂಡ ಭಾನುವಾರ ಇಡೀ ದಿನ ಪ್ರಶ್ನಿಸಿದೆ. ಸಿಐಡಿ ಡಿಐಜಿ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ಆರೋಪಿಗಳ ವಿಚಾರಣೆ ನಡೆಯುತ್ತಿದೆ. ಸೋಮವಾರ ಬೆಳಿಗ್ಗೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಭರ್ತಿಗಾಗಿ ಕೆಪಿಎಸ್‌ಸಿ ನಡೆಸಿದ ನೇಮಕಾತಿ ಪ್ರಕ್ರಿಯೆಯಲ್ಲಿ ಸೋಮನಾಥ್ ಅಲಿಯಾಸ್ ಸೋಮೇಶ್ ಮತ್ತು ಸುಧೀರ್ ಅಲಿಯಾಸ್ ಶ್ರೀಧರ್ ಮಧ್ಯವರ್ತಿಗಳಾಗಿ ಕೆಲಸ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ. ಲಿಖಿತ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ ವಿದ್ಯಾರ್ಥಿಗಳಿಂದ ಹಣ ಪಡೆದು ಉನ್ನತ ಹುದ್ದೆ ಕೊಡಿಸುವಲ್ಲಿ ದಲ್ಲಾಳಿಗಳಾಗಿ ಕಾರ್ಯನಿರ್ವಹಿಸಿದ್ದರು ಎಂಬ ಆರೋಪ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸಲ್ಲಿಸಿರುವ ದೂರಿನಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.