ADVERTISEMENT

ಕೆಪಿಎಸ್‌ಸಿ ಹಗರಣ ವಿಚಾರಣೆ ಮುಂದಕ್ಕೆ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2013, 19:59 IST
Last Updated 5 ಸೆಪ್ಟೆಂಬರ್ 2013, 19:59 IST

ಬೆಂಗಳೂರು: ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಯಲ್ಲಿ 1998, 1999 ಮತ್ತು 2004ರಲ್ಲಿ ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಅವ್ಯವಹಾರ ನಡೆಸಿದೆ ಎಂದು ಆರೋಪಿಸಿ ಖಲೀಲ್ ಅಹಮದ್ ಮತ್ತು ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು  ಹೈಕೋರ್ಟ್ ಇದೇ 18ಕ್ಕೆ ಮುಂದೂಡಿದೆ.

`ಅವ್ಯವಹಾರಕ್ಕೆ ಸಂಬಂಧಿಸಿದಂತೆ, ಆಯೋಗವು ಕೆಲವು ಮಾಹಿತಿಯನ್ನು ಸರ್ಕಾರಕ್ಕೆ ನೀಡಿದೆ. ಅದನ್ನು ಆಧರಿಸಿ ಸರ್ಕಾರ ಕ್ರಮ ಕೈಗೊಳ್ಳಲಿದೆ' ಎಂದು ಸರ್ಕಾರದ ಪರ ಹಾಜರಾದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎಚ್. ಕಾಂತರಾಜ ಅವರು ಮುಖ್ಯ ನ್ಯಾಯಮೂರ್ತಿ ಡಿ.ಎಚ್. ವಘೇಲಾ ಮತ್ತು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ವಿಭಾಗೀಯ ಪೀಠಕ್ಕೆ ತಿಳಿಸಿದರು.

`ನೀವು ಯಾವ ಕ್ರಮ ಜರುಗಿಸುತ್ತೀರಿ ಎಂಬುದನ್ನು ಲಿಖಿತ ರೂಪದಲ್ಲಿ ತಿಳಿಸಿ. ಹಾಗೆಯೇ, ನೇಮಕಾತಿ ಪ್ರಕ್ರಿಯೆಯ ವಿವಿಧ ಹಂತದಲ್ಲಿ ಅಭ್ಯರ್ಥಿಗಳು ಗಳಿಸಿರುವ ಅಂಕಗಳ ಕುರಿತು ಆಯೋಗ ಸರ್ಕಾರಕ್ಕೆ ಮಾಹಿತಿ ನೀಡಲಿ' ಎಂದು ಪೀಠ ನಿರ್ದೇಶನ ನೀಡಿತು.
ಬಾಯರಿಗೆ ಜಾಮೀನಿಲ್ಲ

ಆರ್‌ಟಿಐ ಕಾರ್ಯಕರ್ತ, ಕಾಂಗ್ರೆಸ್ಸಿನ ವಾಸುದೇವ ಅಡಿಗ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ರಮೇಶ ಬಾಯರಿ ಅವರಿಗೆ ಜಾಮೀನು ನೀಡಲು ಹೈಕೋರ್ಟ್ ಮತ್ತೊಮ್ಮ ನಿರಾಕರಿಸಿದೆ. ಬಾಯರಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್. ಆನಂದ, ಗುರುವಾರ ಈ ಆದೇಶ ಪ್ರಕಟಿಸಿದರು. ಬಾಯರಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ಜೂನ್‌ನಲ್ಲಿಯೂ ತಿರಸ್ಕರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.