ಬೆಳಗಾವಿ: `ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ವೀರಶೈವ ಸಮಾಜದವರಿಗೆ ನೀಡಬೇಕು ಎಂಬ ನಮ್ಮ ಬೇಡಿಕೆಯಿಂದ ಹಿಂದೆ ಸರಿಯುವುದಿಲ್ಲ. ಈ ಬಗ್ಗೆ ಪಕ್ಷದ ಹೈಕಮಾಂಡ್ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ. ಕನಿಷ್ಠ 150 ಸ್ಥಾನಗಳನ್ನು ಗೆಲ್ಲಿಸುವ ಸಾಮರ್ಥ್ಯ ಇರುವವರಿಗೆ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಹೈಕಮಾಂಡ್‌ಗೆ ಮನವಿ ಮಾಡಲಾಗಿದೆ~ ಎಂದು ಕಾಂಗ್ರೆಸ್ ಮುಖಂಡ ಶಾಮನೂರು ಶಿವಶಂಕರಪ್ಪ ತಿಳಿಸಿದರು.
`ಪ್ರಜಾವಾಣಿ~ಯೊಂದಿಗೆ ಮಾತನಾಡಿದ ಅವರು, `ಇಂದಿನ ಪರಿಸ್ಥಿತಿಯಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡಬೇಕಾದ ಅಗತ್ಯವಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕಾದರೆ ವೀರಶೈವ ಅಭ್ಯರ್ಥಿಗೆ ಅಧ್ಯಕ್ಷ ಸ್ಥಾನ ನೀಡಬೇಕು. ಹೀಗೆ ಮುಂದುವರಿದರೆ ರಾಜ್ಯದಲ್ಲಿ ಮುಂದಿನ ಚುನಾವಣೆ ನಂತರ ಕಿಚಡಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ~ ಎಂದರು.
`ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಮರಳಿ ರಾಜ್ಯಕ್ಕೆ ಬಂದಿದ್ದಾರೆ. ಆದರೆ ಅವರಿಗೆ ಯಾವ ಸ್ಥಾನ ನೀಡಲಾಗುವುದು ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಕೃಷ್ಣ ಆಗಮನದಿಂದ ಪಕ್ಷಕ್ಕೆ ಆನೆ ಬಲ ಬಂದಿದೆ ಎಂದು ಹೇಳಲಾಗುತ್ತಿದೆ. ಆದರೆ ಕೃಷ್ಣ ಸರ್ಕಾರದಲ್ಲಿ ಸಚಿವರಾಗಿದ್ದವರೂ ನಂತರ ನಡೆದ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದನ್ನು ಮರೆಯಬಾರದು~ ಎಂದು ಹೇಳಿದರು.
`ವೀರಶೈವ ಮಹಾಸಭೆಯು ಯಾವುದೇ ಪಕ್ಷಕ್ಕೂ ಬೆಂಬಲ ವ್ಯಕ್ತಪಡಿಸುವುದಿಲ್ಲ. ಪಕ್ಷಾತೀತ ಸಂಘಟನೆ ಇದಾಗಿದ್ದು, ಎಲ್ಲ ಪಕ್ಷದವರೂ ಪದಾಧಿಕಾರಿಗಳಾಗಿದ್ದಾರೆ. ಸಮಾಜದ ಪ್ರಗತಿಯೊಂದೇ ಮಹಾಸಭೆಯ ಮುಖ್ಯ ಉದ್ದೇಶ~ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.